ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರತಿಭಟನೆ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಎನ್‌ಡಿಟಿವಿ ಜೊತೆ ಮಾತನಾಡಿದ ಸಚಿವರು, ಸಿಜೆಪಿ ಚಳವಳಿಯು ದೇಶವನ್ನು ಒಡೆಯಲು ಯತ್ನಿಸುವ ವಿಚ್ಛಿದ್ರಕಾರಿ ಶಕ್ತಿಗಳ ಬಿ ತಂಡ ಎಂದು ಕಿಡಿಕಾರಿದ್ದಾರೆ.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ದೇಶದ ಜನರಿಂದ ತಿರಸ್ಕರಿಸಲ್ಪಟ್ಟವರು ಈಗ ವೇಷ ಬದಲಿಸಿಕೊಂಡು ಇಡೀ ವ್ಯವಸ್ಥೆಯನ್ನು ಹಾಳು ಮಾಡುತ್ತಿದ್ದಾರೆ. ದೇಶವನ್ನು ವಿಭಜಿಸಲು ಯತ್ನಿಸುತ್ತಿರುವವರ ಪರವಾಗಿ ಇವರು ಘೋಷಣೆಗಳನ್ನು ಕೂಗುತ್ತಿದ್ದಾರೆ. ಈ ರೀತಿ ಮಾಡುತ್ತಿರುವವರು ಯಾರು ಎಂಬುದನ್ನು ಪತ್ತೆ ಹಚ್ಚಲಾಗಿದೆ ಎಂದು ಪ್ರಧಾನ್ ಹೇಳಿದರು.
ನೀಟ್ ಪರೀಕ್ಷೆ ಅತ್ಯಂತ ಯಶಸ್ವಿಯಾಗಿ ನಡೆದಿದೆ. ದೇಶದಾದ್ಯಂತ 22 ಲಕ್ಷಕ್ಕೂ ಅಧಿಕ ವೈದ್ಯಕೀಯ ಆಕಾಂಕ್ಷಿಗಳು ಮರುಪರೀಕ್ಷೆಯನ್ನು ಯಶಸ್ವಿಯಾಗಿ ಬರೆದಿದ್ದಾರೆ ಎಂದರು.
ಸಶಸ್ತ್ರ ಪಡೆಗಳು, ರಾಜ್ಯ ಪೊಲೀಸ್ ಘಟಕಗಳನ್ನು ವ್ಯಾಪಕ ಭದ್ರತೆಗೆ ನಿಯೋಜಿಸಲಾಗಿತ್ತು. ಇದರ ಉಸ್ತುವಾರಿಗಾಗಿ ಹಿರಿಯ ಅಧಿಕಾರಿಗಳನ್ನು ನಿಯೋಜಿಸಲಾಗಿತ್ತು ಎಂದರು.
ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ಈ ಹಿಂದೆ ನಡೆದಿದ್ದ ನೀಟ್ ಪರೀಕ್ಷೆಯನ್ನು ರದ್ದುಗೊಳಿಸಲಾಗಿತ್ತು. ಸಿಜೆಪಿ ಸಂಘಟನೆ ಪತ್ರಿಕೆ ಸೋರಿಕೆ ಖಂಡಿಸಿ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದೆ.

