ನವದೆಹಲಿ: ಬಿಜೆಪಿ ರಾಷ್ಟ್ರೀಯ ಪದಾಧಿಕಾರಿಗಳ ತಂಡದ ಪುನರ್ ರಚನೆಯ ಕುರಿತು ಭಾರಿ ಚರ್ಚೆ ಬೆನ್ನಲ್ಲೇ, ಕೇಂದ್ರ ಸಚಿವ ಅಮಿತ್ ಶಾ ಸೇರಿದಂತೆ ಪಕ್ಷದ ಪ್ರಮುಖ ಹಿರಿಯ ನಾಯಕರು ಸೋಮವಾರ (ಜೂನ್ 15) ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ನಿವಾಸದಲ್ಲಿ ಮಹತ್ವದ ಸಭೆ ನಡೆಸಿದ್ದಾರೆ.
ಅಧಿಕೃತ ಮೂಲಗಳ ಪ್ರಕಾರ, ರಾಜನಾಥ್ ಸಿಂಗ್ ಅವರ ನಿವಾಸದಲ್ಲಿ ನಡೆದ ಈ ಸಭೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್, ಕೇಂದ್ರ ಸಚಿವ ಜೆ.ಪಿ. ನಡ್ಡಾ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಮತ್ತು ಪಕ್ಷದ ಆರ್‌ಎಸ್‌ಎಸ್ ಸಂಪರ್ಕ ಪ್ರಮುಖ್ ಅರುಣ್ ಕುಮಾರ್ ಪಾಲ್ಗೊಂಡಿದ್ದರು.
ಇದರೊಂದಿಗೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರೂ ಸಹ ಸಭೆಯಲ್ಲಿ ಉಪಸ್ಥಿತರಿದ್ದು, ಸುಮಾರು ನಾಲ್ಕು ಗಂಟೆಗಳಿಗೂ ಹೆಚ್ಚು ಕಾಲ ಸುದೀರ್ಘ ಸಮಾಲೋಚನೆ ನಡೆದಿದೆ ಎಂದು ತಿಳಿದುಬಂದಿದೆ.
ಈ ಉನ್ನತ ಮಟ್ಟದ ಸಭೆಯ ಕುರಿತು ಬಿಜೆಪಿಯಿಂದ ಯಾವುದೇ ಅಧಿಕೃತ ಪ್ರಕಟಣೆ ಹೊರಬಿದ್ದಿಲ್ಲವಾದರೂ, ಪಕ್ಷದ ಪದಾಧಿಕಾರಿಗಳ ಬದಲಾವಣೆ ಸೇರಿದಂತೆ ಮುಂಬರುವ ಸಾಂಸ್ಥಿಕ ಸವಾಲುಗಳ ಕುರಿತು ನಾಯಕರು ವ್ಯಾಪಕ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.

