ಮುಜಫರ್‌ಪುರ: ನೀಟ್-ಯುಜಿ ಸೇರಿದಂತೆ ಹಲವು ಸ್ಪರ್ಧಾತ್ಮಕ ಪರೀಕ್ಷೆಗಳ ನಕಲಿ ಪ್ರಶ್ನೆಪತ್ರಿಕೆಗಳನ್ನು ಅಭ್ಯರ್ಥಿಗಳು ಮತ್ತು ಅವರ ಪೋಷಕರಿಗೆ ಮಾರಾಟ ಮಾಡುತ್ತಿದ್ದ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಶನಿವಾರ(ಜೂನ್ 13) ನಾಲ್ವರನ್ನು ಬಂಧಿಸಿದ್ದು, ಆರೋಪಿಗಳನ್ನು ಹರ್ಷ, ಅಮನ್ ಕುಮಾರ್, ಕನ್ಹಯ್ಯಾ ಕುಮಾರ್ ಮತ್ತು ಹರ್ಷ ಕನೋಡಿಯಾ ಎಂದು ಗುರುತಿಸಲಾಗಿದೆ ಎಂದು ಹೇಳಿದ್ದಾರೆ.
ಆರೋಪಿಗಳು, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳು ಮತ್ತು ಪೋಷಕರನ್ನು ಗುರಿಯಾಗಿಸಿಕೊಂಡು ಅವರಿಗೆ ಪ್ರಶ್ನೆ ಪತ್ರಿಕೆಗಳನ್ನು ನೀಡುತ್ತೇವೆ ಎಂದು ನಂಬಿಸುತ್ತಿದ್ದರು. ನಂತರ ಸಾಮಾಜಿಕ ಜಾಲತಾಣಗಳ ಮೂಲಕ ವಿವಿಧ ಪರೀಕ್ಷೆಗಳ ನಕಲಿ ಪ್ರಶ್ನೆ ಪತ್ರಿಕೆಯನ್ನು ಮಾರಾಟ ಮಾಡುತ್ತಿದ್ದರು ಎಂದು ತಿಳಿಸಿದ್ದಾರೆ.
ಇದೇ ಪ್ರಕರಣದಲ್ಲಿ ಜೂನ್ 2ರಂದು ಮನೀಷ್ ಝಾ ಎನ್ನುವವರನ್ನು ಬಂಧಿಸಲಾಗಿತ್ತು. ಅವರು ನೀಡಿದ ಮಾಹಿತಿಯ ಆಧಾರದಲ್ಲಿ ಉಳಿದ ಸಹಚರರನ್ನು ಬಂಧಿಸಲಾಗಿದೆ ಎಂದು ಹೇಳಿದ್ದಾರೆ.
ಮೇ 3ರಂದು ನಡೆದಿದ್ದ 2026ನೇ ಸಾಲಿನ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿತ್ತು. ಜೂನ್ 21ರಂದು ಮರುಪರೀಕ್ಷೆ ನಿಗದಿಪಡಿಸಲಾಗಿದೆ.

