ನ್ಯೂಯಾರ್ಕ್: ಅಮೆರಿಕದ ನ್ಯೂಯಾರ್ಕ್‌ನ ಹೃದಯ ಭಾಗದಲ್ಲಿರುವ ಪ್ರಸಿದ್ಧ ಟೈಮ್ಸ್ ಸ್ಕ್ವೇರ್‌ನಲ್ಲಿ ಗುರುವಾರ ಮಧ್ಯಾಹ್ನ ಗುಂಡಿನ ದಾಳಿ ನಡೆಸಿದ ಆರೋಪದ ಮೇಲೆ 17 ವರ್ಷದ ಬಾಲಕನನ್ನು ಪೊಲೀಸರು ಬಂಧಿಸಿದ್ದಾರೆ.
ವೆಸ್ಟ್ 44 ಮತ್ತು 45ನೇ ರಸ್ತೆಗಳ ನಡುವಿನ ಬ್ರಾಡ್ ವೇಯಲ್ಲಿ ಮಧ್ಯಾಹ್ನ 3 ಗಂಟೆ ಸುಮಾರಿಗೆ ಎರಡು ಗುಂಪುಗಳ ನಡುವೆ ತೀವ್ರ ಗಲಾಟೆ ನಡೆದಿತ್ತು.
ಈ ವೇಳೆ ದುಷ್ಕರ್ಮಿಗಳು ಯುವಕನೊಬ್ಬನ ಕುತ್ತಿಗೆಗೆ ಇರಿದು ಗಾಯಗೊಳಿಸಿದ್ದರು. ಇದಾದ ಕೆಲವೇ ಕ್ಷಣಗಳಲ್ಲಿ, ಯುವಕನನ್ನು ಗಾಯಗೊಳಿದ್ದ ಗುಂಪನ್ನು ಗುರಿಯಾಗಿಸಿಕೊಂಡು ಬಾಲಕನೊಬ್ಬ ಮನಬಂದಂತೆ ಗುಂಡು ಹಾರಿಸಿದ್ದಾನೆ ಎಂದು ನ್ಯೂಯಾರ್ಕ್ ಪೊಲೀಸರು ತಿಳಿಸಿದ್ದಾರೆ.
ಗುಂಡಿನ ದಾಳಿಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಕುತ್ತಿಗೆ ಇರಿತಕ್ಕೊಳಗಾದ ಯುವಕನನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆತ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಗುಂಡು ಹಾರಿಸಿದ ಬಾಲಕನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ತನಿಖೆ ಚುರುಕು: ಘಟನೆ ನಡೆದ ತಕ್ಷಣವೇ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಇಡೀ ಪ್ರದೇಶವನ್ನು ತಮ್ಮ ಸುಪರ್ದಿಗೆ ಪಡೆದರು. ತನಿಖಾಧಿಕಾರಿಗಳು ಸ್ಥಳದಲ್ಲಿದ್ದ ನೀಲಿ ಬಣ್ಣದ ಕಾರನ್ನು ಕೂಲಂಕಷವಾಗಿ ಪರಿಶೀಲಿಸಿದ್ದಾರೆ. ಈ ಗಲಾಟೆಗೆ ಸಂಬಂಧಿಸಿದಂತೆ ಇನ್ನು ಕೆಲವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.

