ತಿರುವನಂತಪುರಂ: ಕೇರಳದಲ್ಲಿ ಶುಕ್ರವಾರ ಭಾರಿ ಪ್ರಮಾಣದ ಮಳೆಯಾಗಿದ್ದು, ವೇಗವಾಗಿ ಬೀಸಿದ ಗಾಳಿಗೆ ಹಲವೆಡೆ ಮರದ ಕೊಂಬೆಗಳು ಮುರಿದು ಬಿದ್ದು ವಾಹನಗಳು ಮತ್ತು ಆಸ್ತಿಗಳಿಗೆ ಹಾನಿಯಾಗಿದೆ.
ಭಾರತೀಯ ಹವಾಮಾನ ಇಲಾಖೆ(ಐಎಂಡಿ)ರಾಜ್ಯದ ಎಂಟು ಜಿಲ್ಲೆಗಳಿಗೆ ಅರೆಂಜ್ ಅಲರ್ಟ್ ಘೋಷಿಸಿದೆ.
ಐಎಂಡಿಯು ಶನಿವಾರ ಮಲಪ್ಪುರಂ, ಕೋಯಿಕ್ಕೋಡ್, ವಯನಾಡು, ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಹಾಗೂ ಭಾನುವಾರ ಮಲಪ್ಪುರಂ, ಕೋಯಿಕ್ಕೋಡ್ ಮತ್ತು ವಯನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಿದ್ದು ವಾರಾಂತ್ಯದಲ್ಲಿ ಮಳೆ ತೀವ್ರಗೊಳ್ಳುವ ನಿರೀಕ್ಷೆಯಿದೆ ಎಂದು ತಿಳಿಸಿದೆ.
ಶುಕ್ರವಾರ ರಾಜ್ಯದ ಎರ್ನಾಕುಲಂ,ತ್ರಿಶೂರ್,ಪಾಲಕ್ಕಾಡ್,ಮಲಪ್ಪುರಂ, ಕೋಯಿಕ್ಕೋಡ್, ವಯನಾಡು,ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಹಾಗೂ ರಾಜ್ಯದ ಉಳಿದ ಆರು ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಿಸಿದೆ.
ಈ ಜಿಲ್ಲೆಗಳ ವಿವಿಧ ಭಾಗಗಳಲ್ಲಿ ಭಾರೀ ಮಳೆ ಮತ್ತು ಗಂಟೆಗೆ 40 ಕಿಲೋಮೀಟರ್ ವೇಗದಲ್ಲಿ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

