ಕೋಯಿಕ್ಕೋಡ್ : ಇಲ್ಲಿನ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ನಡೆಸಿದ ಪ್ರಾಥಮಿಕ ಪರೀಕ್ಷೆಯಲ್ಲಿ 43 ವರ್ಷದ ವ್ಯಕ್ತಿಯೊಬ್ಬರಿಗೆ ನಿಫಾ ವೈರಸ್ ಇರುವುದು ದೃಢಪಟ್ಟಿದ್ದು, ರಾಜ್ಯದಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.
ಅಂತಿಮ ದೃಢೀಕರಣಕ್ಕಾಗಿ ಮಾದರಿಗಳನ್ನು ಪುಣೆಯ ಇನ್‌ಸ್ಟಿಟ್ಯೂಟ್ ಆಫ್ ವೈರಾಲಜಿ (ಎನ್‌ಐವಿ)ಗೆ ಕಳುಹಿಸಲಾಗಿದ್ದು, ಶೀಘ್ರದಲ್ಲೇ ಫಲಿತಾಂಶ ಬರುವ ನಿರೀಕ್ಷೆಯಿದೆ ಎಂದು ಅವರು ಹೇಳಿದ್ದಾರೆ.
ಫೆರೋಕ್ ಮೂಲದ ಉದ್ಯಮಿಯಾದ ಇವರು, ಈ ಮೊದಲು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಬುಧವಾರ ಅವರನ್ನು ಸರ್ಕಾರಿ ವೈದ್ಯಕೀಯ ಕಾಲೇಜಿಗೆ ಸ್ಥಳಾಂತರಿಸಲಾಗಿದ್ದು, ವೆಂಟಿಲೇಟರ್ ಬೆಂಬಲದ ಮೂಲಕ ಚಿಕಿತ್ಸೆ ನೀಡಲಾಗುತ್ತಿದೆ.
ರೋಗಿಯ ಸಂಪರ್ಕಕ್ಕೆ ಬಂದವರನ್ನು ಪತ್ತೆಹಚ್ಚಲು ಮತ್ತು ಪ್ರತ್ಯೇಕಿಸಲು ಆರೋಗ್ಯ ಇಲಾಖೆ ಕ್ರಮಕೈಗೊಂಡಿದೆ. ಅಲ್ಲದೇ ಅವರ ಸಂಪರ್ಕದಲ್ಲಿದ್ದ ಆರೋಗ್ಯ ಸಿಬ್ಬಂದಿ ಹಾಗೂ ಇತರರಿಗೆ ಕ್ವಾರಂಟೈನ್‌ನಲ್ಲಿ ಇರಲು ಸೂಚಿಸಲಾಗಿದೆ. ಆಸ್ಪತ್ರೆಯಲ್ಲಿ ಎಲ್ಲಾ ಅಗತ್ಯ ಔಷಧಿಗಳ ವ್ಯವಸ್ಥೆ ಮಾಡಲಾಗಿದ್ದು, ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ಕೆ. ಮುರಳೀಧರನ್ ಹೇಳಿದ್ದಾರೆ.

