ಲಖನೌ: ಅಯೋಧ್ಯೆಯ ರಾಮ ಮಂದಿರಕ್ಕೆ ಬಂದಿರುವ ದೇಣಿಗೆ ದುರುಪಯೋಗವಾಗಿದೆ ಮತ್ತು ಅಕ್ರಮ ನಡೆದಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿದ್ದವು. ಆ ಬೆನ್ನಲ್ಲೇ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡವು ತನ್ನ ಪ್ರಾಥಮಿಕ ವಿಚಾರಣಾ ವರದಿಯನ್ನು ಮಂಗಳವಾರ (ಜೂನ್ 23) ಉತ್ತರ ಪ್ರದೇಶ ಸರ್ಕಾರಕ್ಕೆ ಸಲ್ಲಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಲಖನೌ ವಿಭಾಗೀಯ ಕಮಿಷನರ್ ವಿಜಯ್ ವಿಶ್ವಾಸ್ ಪಂತ್ ಅವರು ಈ ಪ್ರಾಥಮಿಕ ತನಿಖಾ ವರದಿಯನ್ನು ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಸಂಜಯ್ ಪ್ರಸಾದ್ ಅವರಿಗೆ ಹಸ್ತಾಂತರಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆಯು ಇನ್ನು ಪ್ರಗತಿಯಲ್ಲಿದ್ದು, ಮತ್ತಷ್ಟು ಪ್ರಮುಖ ಸಾಕ್ಷ್ಯ ಹಾಗೂ ಮಾಹಿತಿಗಳನ್ನು ಕಲೆಹಾಕಲಾಗುತ್ತಿದೆ ಎಂದು ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ರಾಮ ಮಂದಿರಕ್ಕೆ ಬಂದಿರುವ ಕಾಣಿಕೆ ಹಾಗೂ ದೇಣಿಗೆಯ ಹಣದಲ್ಲಿ ಅಕ್ರಮ ನಡೆದಿದೆ ಎಂಬ ದೂರುಗಳು ಕೇಳಿಬಂದ ಹಿನ್ನೆಲೆಯಲ್ಲಿ, ಈ ಕುರಿತು ಸಮಗ್ರ ತನಿಖೆ ನಡೆಸುವಂತೆ ದೇವಸ್ಥಾನದ ಟ್ರಸ್ಟ್ ಉತ್ತರ ಪ್ರದೇಶ ಸರ್ಕಾರಕ್ಕೆ ವಿನಂತಿಸಿತ್ತು. ಟ್ರಸ್ಟ್ನ ಮನವಿಯ ಮೇರೆಗೆ ರಾಜ್ಯ ಸರ್ಕಾರವು ಜೂನ್ 13ರಂದು ಉನ್ನತ ಮಟ್ಟದ ಎಸ್ಐಟಿ ತಂಡವನ್ನು ರಚಿಸಿ ತನಿಖೆಗೆ ಆದೇಶಿಸಿತ್ತು.

