ನವದೆಹಲಿ: ಹಿಮಾಲಯ ಮತ್ತು ಈಶಾನ್ಯ ರಾಜ್ಯಗಳಲ್ಲಿ ಕಳೆದ ಕೆಲವು ವಾರಗಳಿಂದ ಸತತವಾಗಿ ಮಳೆ ಸುರಿಯುತ್ತಿದ್ದು, ಮಳೆ ಸಂಬಂಧಿ ಘಟನೆಗಳಲ್ಲಿ ಸುಮಾರು 120 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.
ಅಸ್ಸಾಂ, ಹಿಮಾಚಲಪ್ರದೇಶ, ಅರುಣಾಚಲಪ್ರದೇಶ, ನಾಗಾಲ್ಯಾಂಡ್, ಜಮ್ಮು ಮತ್ತು ಕಾಶ್ಮೀರದಾದ್ಯಂತ ಸಾವಿರಾರು ಜನರು ನಿರಾಶ್ರಿತರಾಗಿದ್ದಾರೆ.
ರಸ್ತೆ ಮತ್ತು ಸೇತುವೆಗಳು ಕೊಚ್ಚಿಕೊಂಡು ಹೋಗಿವೆ. ರೈಲು ಸೇವೆಗಳು ಅಸ್ತವ್ಯಸ್ತಗೊಂಡಿವೆ. ದುರಂತದಲ್ಲಿ ಸಿಲುಕಿಕೊಂಡ ಜನರನ್ನು ಸ್ಥಳಾಂತರಿಸಲು ರಕ್ಷಣಾ ಸಂಸ್ಥೆಗಳು ಸಮರೋಪಾದಿಯಲ್ಲಿ ಶ್ರಮಿಸುತ್ತಿವೆ.
ಜಮ್ಮು ಮತ್ತು ಕಾಶ್ಮೀರ ಅತ್ಯಂತ ತೀವ್ರ ಪೀಡಿತ ಪ್ರದೇಶಗಳಲ್ಲಿ ಒಂದಾಗಿದ್ದು, ಇಲ್ಲಿ ಕಳೆದ 48 ಗಂಟೆಗಳಲ್ಲಿ ಮಳೆ ಸಂಬಂಧಿತ ಘಟನೆಗಳಲ್ಲಿ 23 ಜನರು ಮೃತಪಟ್ಟಿದ್ದಾರೆ. ಇವರಲ್ಲಿ ಹೆಚ್ಚಿನವರು ಪೂಂಚ್ ಮತ್ತು ರಾಜೌರಿ ಜಿಲ್ಲೆಯವರಾಗಿದ್ದಾರೆ. ಶೋಧ ಕಾರ್ಯಾಚರಣೆ ಮುಂದುವರಿದಿದ್ದು, ಏಳು ಜನರು ಇನ್ನೂ ಪತ್ತೆಯಾಗಿಲ್ಲ. ಭಾರತೀಯ ಹವಾಮಾನ ಇಲಾಖೆ ಮುಂದಿನ 48 ಗಂಟೆಗಳ ಹವಾಮಾನ ಮುನ್ಸೂಚನೆ ನೀಡಿದ್ದು, ಭಾರೀ ಮಳೆ, ಹಠಾತ್ ಪ್ರವಾಹ, ಭೂಕುಸಿತದ ಭೀತಿಯ ಬಗ್ಗೆ ಎಚ್ಚರಿಸಿದೆ.
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಜುಲೈ ತಿಂಗಳೊಂದರಲ್ಲೇ ಭೂಕುಸಿತ, ರಸ್ತೆ ಅಪಘಾತ, ಬಂಡೆ ಕುಸಿತದಿಂದ ಮೃತಪಟ್ಟವರು ಸೇರಿದಂತೆ ಮಳೆ ಸಂಬಂಧಿ ಘಟನೆಗಳಲ್ಲಿ 66 ಮಂದಿ ಮೃತಪಟ್ಟಿದ್ದಾರೆ.
ಅಸ್ಸಾಂನಲ್ಲಿ ಕಳೆದ 24 ಗಂಟೆಗಳಲ್ಲಿ ಮಳೆಯಿಂದಾಗಿ ಸೃಷ್ಟಿಯಾದ ಪ್ರವಾಹದಿಂದ 21 ಜನರು ಮೃತಪಟ್ಟಿದ್ದಾರೆ. ಇದರೊಂದಿಗೆ ಈ ವರ್ಷ ಪ್ರವಾಹದಲ್ಲಿ ಮೃತಪಟ್ಟವರ ಸಂಖ್ಯೆ 31ಕ್ಕೆ ಏರಿಕೆಯಾಗಿದೆ. ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಕಾರ, 16 ಜಿಲ್ಲೆಗಳಲ್ಲಿ 5.64 ಲಕ್ಷಕ್ಕೂ ಅಧಿಕ ಜನರು ಸಂತ್ರಸ್ತರಾಗಿದ್ದಾರೆ.
ನಾಗಾಲ್ಯಾಂಡ್ ಮೋನ್ ಜಿಲ್ಲೆಯಲ್ಲಿ ಹಠಾತ್ ಪ್ರವಾಹ ಮತ್ತು ಭೂಕುಸಿತದಿಂದ ಮೃತಪಟ್ಟವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ. ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ನಾಲ್ಕು ಜನರು ಇನ್ನೂ ಪತ್ತೆಯಾಗಿಲ್ಲ.
ಅರುಣಾಚಲ ಪ್ರದೇಶದ 5 ಜಿಲ್ಲೆಗಳಲ್ಲಿ ಕಳೆದ 24 ಗಂಟೆಗಳಲ್ಲಿ ಸುರಿಯುತ್ತಿರುವ ಸತತ ಮಳೆಯಿಂದಾಗಿ ಪ್ರವಾಹ ಉಂಟಾಗಿದ್ದು, ಸುಮಾರು 1.49 ಲಕ್ಷ ಜನರು ತೊಂದರೆಗೆ ಒಳಗಾಗಿದ್ದಾರೆ. ಮಳೆ ಸಂಬಂಧಿತ ಘಟನೆಗಳಲ್ಲಿ ಹಲವರು ಮೃತಪಟ್ಟಿದ್ದಾರೆ. ಆದರೆ, ಅಧಿಕೃತ ಸಾವುನೋವುಗಳ ಸಂಖ್ಯೆ ಇನ್ನೂ ತಿಳಿದು ಬಂದಿಲ್ಲ.
ಒಡಿಶಾದಲ್ಲಿ ಭಾರೀ ಮಳೆ ಮುಂದುವರಿದಿದ್ದು, ಹಲವು ನಗರಗಳು ಜಲಾವೃತಗೊಂಡಿವೆ. ಮುಂದಿನ ಐದು ದಿನಗಳ ಕಾಲ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

