ಮುಂಬೈ: ಮಹಾರಾಷ್ಟ್ರದ ಪುಣೆ ಜಿಲ್ಲೆಯ ಪಿಂಪ್ರಿ-ಚಿಂಚ್ವಾಡ ಪ್ರದೇಶದಲ್ಲಿ ಬುಧವಾರ ಬೃಹತ್ ಕಟ್ಟಡವೊಂದು ಕುಸಿದಿದ್ದು, ಕನಿಷ್ಠ 15 ಜನರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಳೆದ ಕೆಲವು ದಿನಗಳಿಂದ ಪುಣೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ನಡುವೆಯೇ ಈ ದುರಂತ ಸಂಭವಿಸಿದೆ.
ಅಗ್ನಿಶಾಮಕ ಸಿಬ್ಬಂದಿ, ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧಿಕಾರಿಗಳು ಸೇರಿದಂತೆ ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ಅವಶೇಷಗಳಡಿ ಸಿಲುಕಿರುವವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಭಾರಿ ಯಂತ್ರೋಪಕರಣಗಳನ್ನು ಬಳಸಿ ಅವಶೇಷಗಳನ್ನು ತೆರವುಗೊಳಿಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸಾವು-ನೋವು ಅಥವಾ ಗಾಯಗೊಂಡವರ ಸಂಖ್ಯೆಯನ್ನು ಅಧಿಕಾರಿಗಳು ಇನ್ನೂ ಖಚಿತಪಡಿಸಿಲ್ಲ. ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
ಮಹಾರಾಷ್ಟ್ರದಾದ್ಯಂತ ಭಾರಿ ಮಳೆಯಿಂದಾಗಿ ಪ್ರವಾಹ ಸೇರಿದಂತೆ ಕಟ್ಟಡಗಳಿಗೆ ಹಾನಿಯುಂಟಾಗುತ್ತಿರುವ ಪ್ರಕರಣಗಳು ವರದಿಯಾಗಿವೆ. ಪುಣೆ ಮತ್ತು ಪಿಂಪ್ರಿ-ಚಿಂಚ್ವಾಡದಲ್ಲಿ ಕಳೆದ ಒಂದು ವಾರದಿಂದ ಎಡೆಬಿಡದೆ ಮಳೆ ಸುರಿಯುತ್ತಿದ್ದು, 6,000ಕ್ಕೂ ಹೆಚ್ಚು ನಿವಾಸಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ.
ಈ ಪ್ರದೇಶದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಭಾರತೀಯ ಹವಾಮಾನ ಇಲಾಖೆ (ಐಎಂಡಿ) 'ಆರೆಂಜ್ ಅಲರ್ಟ್' ಘೋಷಿಸಿದೆ. ಜತೆಗೆ, ಪುಣೆಯ ಕೆಲವು ಭಾಗಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಜುಲೈ ಮೊದಲ ವಾರದಲ್ಲೇ ಪುಣೆ ಜಿಲ್ಲೆಯಲ್ಲಿ ಮಾಸಿಕ ಸರಾಸರಿಗಿಂತ ಹೆಚ್ಚಿನ ಮಳೆ ದಾಖಲಾಗಿದೆ. ಇನ್ನು ಭೂಕುಸಿತ ಮತ್ತು ಗೋಡೆ ಕುಸಿತ ಸೇರಿದಂತೆ ಮಳೆ ಸಂಬಂಧಿತ ಅವಘಡಗಳಲ್ಲಿ ಹಲವರು ಮೃತಪಟ್ಟಿದ್ದಾರೆ.
ಕೆಲವು ದಿನಗಳ ಹಿಂದಷ್ಟೇ ಮುಂಬೈನ ಮಾಂಖುರ್ಡ್ ಪ್ರದೇಶದಲ್ಲಿ ಭಾರಿ ಮಳೆಯಿಂದಾಗಿ ಮೂರು ಅಂತಸ್ತಿನ ವಸತಿ ಕಟ್ಟಡ ಕುಸಿದು ಐದು ಮಕ್ಕಳು ಸೇರಿದಂತೆ ಆರು ಮಂದಿ ಮೃತಪಟ್ಟ ಘಟನೆ ಮಾಸುವ ಮುನ್ನವೇ ಮತ್ತೊಂದು ದುರ್ಘಟನೆ ಸಂಭವಿಸಿದೆ.

