ಲಖನೌ: ಮುಂದಿನ ವರ್ಷ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದು ಮತ್ತು 2029ರಲ್ಲಿ ರಾಹುಲ್ ಗಾಂಧಿ ಅವರನ್ನು ದೇಶದ ಪ್ರಧಾನಿ ಮಾಡಲಿದ್ದೇವೆ ಎಂದು ಉತ್ತರ ಪ್ರದೇಶದ ನೂತನ ಕಾಂಗ್ರೆಸ್ ಉಸ್ತುವಾರಿ ರಾಜೇಂದ್ರ ಪಾಲ್ ಗೌತಮ್ ಹೇಳಿದ್ದಾರೆ.
ತಳಮಟ್ಟದಿಂದ ಪಕ್ಷವನ್ನು ಬಲಪಡಿಸುವ ಮೂಲಕ ನಮ್ಮ ಕಾರ್ಯಕರ್ತರಿಗೆ ಮನ್ನಣೆ ನೀಡಲಾಗುವುದು. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಒಗ್ಗಟ್ಟಿನಿಂದ ಕೆಲಸ ಮಾಡಿ ಕಾಂಗ್ರೆಸ್ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲಾಗುವುದು ಎಂದರು.
ಕಾಂಗ್ರೆಸ್ ಉಸ್ತುವಾರಿಯಾಗಿ ನೇಮಕಗೊಂಡ ನಂತರ ಮೊದಲ ಬಾರಿಗೆ ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ಗೌತಮ್, ನಾವು ಒಟ್ಟಾಗಿ ಕೆಲಸಮಾಡಲಿದ್ದೇವೆ, ಪ್ರತಿ ಬೂತ್ ಮಟ್ಟದಲ್ಲಿ ಪಕ್ಷವನ್ನು ಬಲಪಡಿಸಲಿದ್ದೇವೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶವನ್ನು ಗೆಲ್ಲಲಿದ್ದೇವೆ ಮತ್ತು 2029ರಲ್ಲಿ ರಾಹುಲ್ ಗಾಂಧಿ ಅವರನ್ನು ದೇಶದ ಪ್ರಧಾನಿ ಮಾಡಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಇಲ್ಲಿನ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಅಜಯ್ ರೈ ನೇತೃತ್ವದಲ್ಲಿ ನಡೆದ ಸ್ವಾಗತ ಕಾರ್ಯಕ್ರಮದ ಬಳಿಕ ಅವರು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.
ಅಂಬೇಡ್ಕರ್ ಮತ್ತು ಕಾಂಗ್ರೆಸ್ ನಡುವೆ ಭಿನ್ನಾಭಿಪ್ರಾಯವಿರಲಿಲ್ಲ: ಡಾ.ಬಿ.ಆರ್. ಅಂಬೇಡ್ಕರ್ ಅವರು ರೂಪಿಸಿದ ಸಂವಿಧಾನವನ್ನು ರಕ್ಷಿಸಲು ಕಾಂಗ್ರೆಸ್ ಹೋರಾಡಲಿದೆ ಎಂದ ಗೌತಮ್, ಅಂಬೇಡ್ಕರ್ ಮತ್ತು ಕಾಂಗ್ರೆಸ್ ನಡುವೆ ಭಿನ್ನಾಭಿಪ್ರಾಯವಿತ್ತು ಎಂದು ಬಿಂಬಿಸುವ ಪ್ರಯತ್ನಗಳನ್ನು ತಳ್ಳಿಹಾಕಿದರು. ಬಾಬಾಸಾಹೇಬರು ಪಕ್ಷವನ್ನು ಬೆಂಬಲಿಸುತ್ತಿದ್ದರು. ಅದಕ್ಕಾಗಿಯೇ ಕಾಂಗ್ರೆಸ್ ಅವರನ್ನು ದೇಶದ ಮೊದಲ ಕಾನೂನು ಸಚಿವರನ್ನಾಗಿ ಮಾಡಿತ್ತು ಎಂದು ನೆನಪಿಸಿದರು.
ಬಿಜೆಪಿ ವಿರುದ್ಧ ವಾಗ್ದಾಳಿ: ಕೇಂದ್ರ ಮತ್ತು ರಾಜ್ಯದಲ್ಲಿನ ಬಿಜೆಪಿ ನೇತೃತ್ವದ ಸರ್ಕಾರಗಳ ವಿರುದ್ಧ ವಾಗ್ದಾಳಿ ನಡೆಸಿದ ಗೌತಮ್, ಭಾರತದ ಆರ್ಥಿಕ ಪ್ರಗತಿ ಹೊರತಾಗಿಯೂ ಇಂದಿಗೂ ಶಿಕ್ಷಣ ಬಡವರಿಗೆ ಕೈಗೆಟುಕದಂತಾಗಿದೆ. ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆಯನ್ನು ತಡೆಯಲು ಮತ್ತು ಸರ್ಕಾರಿ ಉದ್ಯೋಗಗಳನ್ನು ನೀಡಲು ಸರ್ಕಾರ ವಿಫಲವಾಗಿದೆ ಎಂದು ಅವರು ದೂರಿದರು.
ಪಕ್ಷಕ್ಕಾಗಿ ಶ್ರಮಿಸುವ ಕಾರ್ಯಕರ್ತರಿಗೆ ಮುಂದಕ್ಕೆ ಬರಲು ಸೂಕ್ತ ಅವಕಾಶಗಳನ್ನು ನೀಡಲಾಗುವುದು ಎಂದು ಅವರು ಇದೇ ವೇಳೆ ಭರವಸೆ ನೀಡಿದರು.

