ಬೀಜಿಂಗ್: ದಕ್ಷಿಣ ಚೀನಾದಲ್ಲಿ ಭಾರಿ ಪ್ರವಾಹ ಉಂಟಾಗಿದ್ದು, ವಿವಿಧ ಅವಘಡಗಳಲ್ಲಿ ಈವರೆಗೆ 39 ಮಂದಿ ಮೃತಪಟ್ಟಿದ್ದಾರೆ. ಈ ಪೈಕಿ 26 ಮಂದಿ, ನ್ಯಾನ್ನಿಂಗ್ ನಗರದಲ್ಲಿ ಅಣೆಕಟ್ಟೆ ಒಡೆದು ಸಂಭವಿಸಿದ ದುರಂತದಲ್ಲಿ ಸಾವಿಗೀಡಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಾಯುಭಾರ ಕುಸಿತದಿಂದ ಚಂಡಮಾರುತ ಉಂಟಾಗಿದ್ದು, ಇದರಿಂದ ಗುವಾಂಗ್‌ಕ್ಸಿ ಪ್ರದೇಶದಲ್ಲಿ ಹಲವು ದಿನಗಳಿಂದ ಭಾರಿ ಮಳೆ ಸುರಿಯುತ್ತಿದೆ. ಒಟ್ಟು 1.30 ಲಕ್ಷಕ್ಕೂ ಅಧಿಕ ಮಂದಿಯನ್ನು ಬಾಧಿತ ಪ್ರದೇಶದಿಂದ ಸ್ಥಳಾಂತರಿಸಲಾಗಿದೆ. ಪ್ರವಾಹದಲ್ಲಿ ಸಿಲುಕಿರುವವರ ರಕ್ಷಣೆಗೆ ಕಾರ್ಯಾಚರಣೆ ನಡೆಸಲಾಗುತ್ತಿದೆ. ಇದಕ್ಕಾಗಿ 8,000ಕ್ಕೂ ಹೆಚ್ಚು ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, 5,700ಕ್ಕೂ ಹೆಚ್ಚು ದೋಣಿಗಳನ್ನು ಬಳಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಹಲವು ಪ್ರದೇಶಗಳಲ್ಲಿ 10 ರಿಂದ 40 ಸೆಂ.ಮೀ ಮಳೆಯಾಗಿದೆ ಎಂದು ರಾಷ್ಟ್ರೀಯ ಹವಾಮಾನ ಕೇಂದ್ರ ತಿಳಿಸಿದೆ.

