ನವದೆಹಲಿ: ಕೇಂದ್ರೀಯ ಪ್ರೌಢಶಿಕ್ಷಣ ಮಂಡಳಿಯು (ಸಿಬಿಎಸ್‌ಇ) 10ನೇ ತರಗತಿಯ 2ನೇ ಬೋರ್ಡ್ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಇದರಲ್ಲಿ ಉತ್ತೀರ್ಣರಾದ ಪ್ರಮಾಣವು ಶೇಕಡ 96.78ಕ್ಕೆ ಏರಿಕೆಯಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮೊದಲ ಸಲ ನಡೆಸಿದ ಬೋರ್ಡ್ ಪರೀಕ್ಷೆಯಲ್ಲಿ ಉತ್ತೀರ್ಣರಾದವರ ಪ್ರಮಾಣ ಶೇಕಡ 93.6ರಷ್ಟಿತ್ತು. ಎರಡು ಫಲಿತಾಂಶಗಳನ್ನು ಒಟ್ಟುಗೂಡಿಸಿದ ನಂತರ, ಹೊಸ ಉತ್ತೀರ್ಣವಾರು ಫಲಿತಾಂಶವನ್ನು ಪ್ರಕಟಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
'ಎರಡನೇ ಸಲ ನಡೆದ ಪರೀಕ್ಷೆಗೆ 6.63 ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು. ಇದರಲ್ಲಿ 5.13 ಲಕ್ಷ ವಿದ್ಯಾರ್ಥಿಗಳು ತಮ್ಮ ಅಂಕ ಸುಧಾರಿಸಿಕೊಳ್ಳುವುದಕ್ಕಾಗಿಯೇ ಪರೀಕ್ಷೆ ಬರೆದಿದ್ದರು. ಮುಖ್ಯ ಪರೀಕ್ಷೆಗೆ ಹೋಲಿಸಿದರೆ ಶೇಕಡ 59ರಷ್ಟು ವಿದ್ಯಾರ್ಥಿಗಳು ತಮ್ಮ ಕಾರ್ಯಕ್ಷಮತೆಯನ್ನು ಸುಧಾರಿಸಿದ್ದಾರೆ' ಎಂದು ಸಿಬಿಎಸ್‌ಇ ಪರೀಕ್ಷಾ ನಿಯಂತ್ರಕ ಸನ್ಯಾಮ್ ಭಾರದ್ವಾಜ್ ತಿಳಿಸಿದ್ದಾರೆ.

