ಇಂಫಾಲ: ಮಣಿಪುರದ ಉಖ್ರುಲ್ ಜಿಲ್ಲೆಯಲ್ಲಿ ಬಂಡುಕೋರರು ನಡೆಸಿದ ಹೊಂಚು ದಾಳಿಯಲ್ಲಿ ಅಸ್ಸಾಂ ರೈಫಲ್ಸ್ ನ ಇಬ್ಬರು ಯೋಧರು ಹುತಾತ್ಮರಾಗಿದ್ದು, ಹಲವು ಯೋಧರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದಾಳಿಯ ಬಳಿಕ ಭದ್ರತಾ ಪಡೆಗಳು ಪ್ರದೇಶವನ್ನು ಸುತ್ತುವರಿದು ಶೋಧ ಕಾರ್ಯಾಚರಣೆ ಆರಂಭಿಸಿವೆ.
ಗಾಯಗೊಂಡ ಯೋಧರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ಈ ದಾಳಿಯನ್ನು ಮಣಿಪುರ ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ಖಂಡಿಸಿದ್ದು, ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ ಹಾಗೂ ಅವರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ.
ಮಣಿಪುರದಲ್ಲಿ ಕಳೆದ ಎರಡು ವರ್ಷಗಳಿಂದ ಜನಾಂಗೀಯ ಸಂಘರ್ಷ ಮುಂದುವರಿದಿರುವ ಹಿನ್ನೆಲೆಯಲ್ಲಿ ವಿವಿಧ ಪ್ರದೇಶಗಳಲ್ಲಿ ಹಿಂಸಾಚಾರದ ಘಟನೆಗಳು ಸಂಭವಿಸುತ್ತಿವೆ. ಈ ನಡುವೆ ಭದ್ರತಾ ಪಡೆಗಳ ಮೇಲೆ ನಡೆದಿರುವ ಈ ಹೊಂಚು ದಾಳಿ ಭದ್ರತಾ ಪರಿಸ್ಥಿತಿಯ ಬಗ್ಗೆ ಆತಂಕ ಹೆಚ್ಚಿಸಿದೆ.

