ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಸಿಜೆಪಿ (ಕಾಕ್ರೋಚ್ ಜನತಾ ಪಾರ್ಟಿ) ನಡೆಸುತ್ತಿರುವ ಪ್ರತಿಭಟನೆ 15ನೇ ದಿನಕ್ಕೆ ಕಾಲಿಟ್ಟಿದೆ.
ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಕಳೆದ ಏಳು ದಿನಗಳಿಂದ ಪರಿಸರ ಕಾರ್ಯಕರ್ತ ಸೋನಂ ವಾಂಗ್ಚೂಕ್ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.
ಅವರ ದೇಹದ ತೂಕ ಐದು ಕೆ.ಜಿ ಕಡಿಮೆಯಾಗಿದ್ದು ಆರೋಗ್ಯ ಕ್ಷೀಣಿಸುತ್ತಿದೆ ಎಂದು ಸಿಜೆಪಿ ತಿಳಿಸಿದೆ.
ನೀಟ್ ಪರೀಕ್ಷಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಬೇಕು ಸಿಜೆಪಿ ಪಟ್ಟು ಹಿಡಿದಿದೆ.
ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ, ವಾಂಗ್ಚೂಕ್ ಅವರ ಆರೋಗ್ಯ ಸ್ಥಿತಿ ದಿನದಿಂದ ದಿನಕ್ಕೆ ಹದಗೆಡುತ್ತಿದ್ದರೂ ಇನ್ನೂ ಪ್ರಧಾನ್ ಯಾಕೆ ರಾಜೀನಾಮೆ ನೀಡಿಲ್ಲ ಎಂದು ದಿಪ್ಕೆ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.
ಧರ್ಮೇಂದ್ರ ಪ್ರಧಾನ್ ಅವರನ್ನು ವಜಾಗೊಳಿಸಲು ಪ್ರಧಾನಿಯವರು ಇನ್ನು ಎಷ್ಟು ದಿನ ಕಾಯುತ್ತಾರೆ ಎಂದು ದೀಪ್ಕೆ ಪ್ರಶ್ನೆ ಮಾಡಿದ್ದಾರೆ.

