ಡೆಹ್ರಾಡೂನ್: ಅಯೋಧ್ಯೆ ರಾಮಮಂದಿರದಲ್ಲಿ ನಡೆದಿದೆ ಎನ್ನಲಾದ ಹಣ ದುರುಪಯೋಗ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಮೌನ ವಹಿಸಿರುವುದು ಏಕೆ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಈ ಕುರಿತು ಮಾತನಾಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಸುಪ್ರೀಂ ಕೋರ್ಟ್ ನೇತೃತ್ವದಲ್ಲಿ ತನಿಖೆ ನಡೆಸಬೇಕೆಂದು ಅವರು ಒತ್ತಾಯಿಸಿದ್ದಾರೆ.
ರಾಮಮಂದಿರದ ಹೆಸರಿನಲ್ಲಿ ಬಿಜೆಪಿ, ಆರ್ಎಸ್ಎಸ್ ಮತ್ತು ವಿಎಚ್ಪಿ ವರ್ಷಗಳಿಂದ ದೇಣಿಗೆ ಸಂಗ್ರಹಿಸುತ್ತಿವೆ. ಆದರೆ ಟ್ರಸ್ಟ್ನ ಅಧಿಕಾರಿಗಳು ಚಿನ್ನ ಮತ್ತು ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ. ಪ್ರಧಾನಿಯವರ ನೇತೃತ್ವದಲ್ಲಿಯೇ ರಾಮಮಂದಿರ ಟ್ರಸ್ಟ್ ರಚನೆಯಾಗಿರುವುದರಿಂದ, ಈ ಕಳವಿಗೆ ಯಾರು ಜವಾಬ್ದಾರರು ಎಂಬುದನ್ನು ಪ್ರಧಾನಿ ಸ್ಪಷ್ಟಪಡಿಸಬೇಕು. ಮುಂಬರುವ ಸಂಸತ್ ಅಧಿವೇಶನದಲ್ಲಿ ಕಾಂಗ್ರೆಸ್ ಈ ವಿಷಯವನ್ನು ಪ್ರಮುಖವಾಗಿ ಪ್ರಸ್ತಾಪಿಸಲಿದೆ ಎಂದು ವೇಣುಗೋಪಾಲ್ ತಿಳಿಸಿದ್ದಾರೆ.
ಉತ್ತರಾಖಂಡ ಚುನಾವಣೆ: ಕಾಂಗ್ರೆಸ್ ಸಜ್ಜು
ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ಉತ್ತರಾಖಂಡ ವಿಧಾನಸಭಾ ಚುನಾವಣೆಯ ಕುರಿತು ಮಾತನಾಡಿದ ವೇಣುಗೋಪಾಲ್, ಕಳೆದ ಎರಡು ದಿನಗಳಿಂದ ಪಕ್ಷದ ಸಿದ್ಧತೆಗಳ ಕುರಿತು ಹಿರಿಯ ನಾಯಕರು ಹಾಗೂ ವಿವಿಧ ಸಮಿತಿಗಳೊಂದಿಗೆ ಪರಾಮರ್ಶೆ ನಡೆಸಲಾಗಿದೆ ಎಂದಿದ್ದಾರೆ.
ರಾಜ್ಯದ ಬಿಜೆಪಿ ಸರ್ಕಾರದ ವಿರುದ್ಧ ಜನರಲ್ಲಿ ತೀವ್ರ ಅಸಮಾಧಾನವಿದ್ದು, ನಿರುದ್ಯೋಗ ಮತ್ತು ವಲಸೆ ಇಲ್ಲಿನ ಪ್ರಮುಖ ಸಮಸ್ಯೆಗಳಾಗಿವೆ. ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಒಗ್ಗಟ್ಟಿನಿಂದ ಸ್ಪರ್ಧಿಸಿ ಜಯಗಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಚುನಾವಣಾ ಪ್ರಣಾಳಿಕೆ ಸಿದ್ಧಪಡಿಸಲು ಶೀಘ್ರದಲ್ಲೇ ಸಮಿತಿಯೊಂದನ್ನು ರಚಿಸಿ, ಯುವಕರು, ರೈತರು ಮತ್ತು ಮಹಿಳೆಯರ ಅಭಿಪ್ರಾಯಗಳನ್ನು ಕ್ರೋಡೀಕರಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು.

