ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಭಾಗವಹಿಸದಂತೆ ತನ್ನ ವಿದ್ಯಾರ್ಥಿಗಳಿಗೆ ದೆಹಲಿ ವಿಶ್ವವಿದ್ಯಾಲಯವು ಸೂಚಿಸಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ವಿದ್ಯಾರ್ಥಿಗಳಿಗೆ ಬೆದರಿಕೆ ಹಾಕಲು ನಿಮಗೆಷ್ಟು ಧೈರ್ಯ? ಎಂದು ಪ್ರಶ್ನಿಸಿದ್ದಾರೆ.
ಗುರುವಾರ(ಜುಲೈ 23) ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಪೋಸ್ಟ್ ಹಂಚಿಕೊಂಡಿರುವ ವಿಶ್ವವಿದ್ಯಾಲಯವು, ವಿದ್ಯಾರ್ಥಿಗಳ ಸುರಕ್ಷತೆ, ಕಾನೂನು ಪರಿಣಾಮಗಳನ್ನು ಉಲ್ಲೇಖಿಸಿ, ಪ್ರತಿಭಟನೆಯಲ್ಲಿ ಭಾಗವಹಿಸಬೇಡಿ ಎಂದು ಸಲಹೆ ನೀಡಿತ್ತು.
ಇದಕ್ಕೆ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, 'ವಿದ್ಯಾರ್ಥಿಗಳು ತಮ್ಮ ಪ್ರಜಾಪ್ರಭುತ್ವದ ಹಕ್ಕುಗಳನ್ನು ಚಲಾಯಿಸಲು ಬಿಡದೆ ಅವರಿಗೆ ಬೆದರಿಕೆ ಹಾಕಲು ನಿಮಗಷ್ಟು ಧೈರ್ಯವೇ? ನೆನಪಿರಲಿ, ಸಮಯ ಬಂದಾಗ ನೀವೇ ಹೊಣೆಗಾರರಾಗಬೇಕಾಗುತ್ತದೆ' ಎಂದು ವಿಶ್ವವಿದ್ಯಾಲಯ ನಡೆಯನ್ನು ಟೀಕಿಸಿದ್ದಾರೆ.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ(ಸಿಜೆಪಿ) ಪ್ರತಿಭಟನೆ ನಡೆಸುತ್ತಿದೆ.
ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿ ಉಪವಾಸ ಸತ್ಯಾಗ್ರಹ ಕುಳಿತಿದ್ದ ಪರಿಸರ ಕಾರ್ಯಕರ್ತ ಸೊನಮ್ ವಾಂಗ್ಚೂಕ್ ಅವರು ಸರ್ಕಾರ ಲಿಖಿತ ಭರವಸೆ ನೀಡಿದ ಬಳಿಕ ಇಂದು(ಶುಕ್ರವಾರ) ತಮ್ಮ ಉಪವಾಸವನ್ನು ಅಂತ್ಯಗೊಳಿಸಿದ್ದಾರೆ.
ಸೊನಮ್ ಅವರು ಉಪವಾಸ ಅಂತ್ಯಗೊಳಿಸಿರುವುದನ್ನು ಸ್ವಾಗತಿಸಿರುವ ಸಿಜೆಪಿ, ಪ್ರಧಾನ್ ರಾಜೀನಾಮೆ ನೀಡುವವರೆಗೂ ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿದೆ.

