ಗುವಾಹಟಿ: ಅಸ್ಸಾಂ ಸರ್ಕಾರದ ಹಿರಿಯ ಸಚಿವ ಕೇಶವ ಮಹಂತ ಅವರ ಪುತ್ರಿ ದಿಬಿಸಾ ಮಹಂತ ಅವರು ಕೇಂದ್ರದ ನರೇಂದ್ರ ಮೋದಿ ಸರ್ಕಾರದ ವಿರುದ್ಧ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾಗಿ 'ಎನ್ಡಿಟಿವಿ' ವರದಿ ಮಾಡಿದೆ.
ಗುವಾಹಟಿಯ ಚಚಲ್ನಲ್ಲಿ ಗುರುವಾರ ನಡೆದ ಪ್ರತಿಭಟನೆಯಲ್ಲಿ ವಿದ್ಯಾರ್ಥಿಗಳೊಂದಿಗೆ ಸೇರಿ ಫಲಕಗಳನ್ನು ಹಿಡಿದು ಘೋಷಣೆಗಳನ್ನು ಕೂಗಿದ ಅವರು, ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿದರು. ಈ ಪ್ರತಿಭಟನೆಯ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿವೆ.
ಪ್ರತಿಭಟನೆಯ ವೇಳೆ ಧರ್ಮೇಂದ್ರ ಪ್ರಧಾನ್ ಮತ್ತು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಘೋಷಣೆಗಳನ್ನು ಕೂಗುತ್ತಿರುವ ವಿಡಿಯೊಗಳು ವ್ಯಾಪಕವಾಗಿ ಹಂಚಿಕೆಯಾಗುತ್ತಿವೆ.
ದಿಬಿಸಾ ಅವರ ತಂದೆ ಕೇಶವ ಮಹಂತ ಅವರು ಅಸ್ಸಾಂ ಸರ್ಕಾರದಲ್ಲಿ ಕಂದಾಯ ಸಚಿವರಾಗಿದ್ದು, ಬಿಜೆಪಿ ನೇತೃತ್ವದ ಮೈತ್ರಿ ಸರ್ಕಾರದ ಭಾಗವಾಗಿರುವ ಅಸೋಂ ಗಣ ಪರಿಷತ್ (ಎಜಿಪಿ) ಪಕ್ಷದ ಹಿರಿಯ ನಾಯಕರಾಗಿದ್ದಾರೆ. 2016ರಿಂದ ಅವರು ರಾಜ್ಯ ಸಚಿವ ಸಂಪುಟದಲ್ಲಿ ಸಚಿವರಾಗಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿದ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ, ವಿದ್ಯಾರ್ಥಿಗಳ ಪ್ರತಿಭಟನೆಯ ಹಕ್ಕನ್ನು ಸರ್ಕಾರ ಗೌರವಿಸುತ್ತದೆ ಎಂದು ಹೇಳಿದ್ದಾರೆ.
'ಇದು ವಿದ್ಯಾರ್ಥಿಗಳ ಪ್ರತಿಭಟನೆ. ಅವರ ಬೇಡಿಕೆಗಳು ಮತ್ತು ವಾದಗಳನ್ನು ನಾವು ಗೌರವಿಸುತ್ತೇವೆ. ಈ ವಿಷಯವನ್ನು ಪ್ರಧಾನಿ ನರೇಂದ್ರ ಮೋದಿ ಗಂಭೀರವಾಗಿ ಪರಿಗಣಿಸಿದ್ದಾರೆ. ಆದರೆ, ಅಸ್ಸಾಂ ಪ್ರವಾಹದಂತಹ ಗಂಭೀರ ಪರಿಸ್ಥಿತಿಯನ್ನು ಎದುರಿಸುತ್ತಿರುವುದರಿಂದ ಎಲ್ಲರೂ ಅದರತ್ತಲೂ ಗಮನ ಹರಿಸಬೇಕು' ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

