ಇಂಫಾಲ: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಶನಿವಾರ ಸಂಜೆ ಭತ್ತದ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದ 53 ವರ್ಷದ ವ್ಯಕ್ತಿಯೊಬ್ಬನನ್ನು ಗುಂಡಿಕ್ಕಿ ಕೊಲ್ಲಲಾಗಿದೆ.
ಕುಕಿ ಸಮುದಾಯದವರು ಹೆಚ್ಚಾಗಿರುವ ಈ ಜಿಲ್ಲೆಯ 'ಗೋವಾಜಾಂಗ್' ಗ್ರಾಮದ ನಿವಾಸಿ ಹಾವೋಲಾಲ್ ಸಿಂಗ್ಸಿತ್, ತಮ್ಮ ಪತ್ನಿ ನೆಮ್ನೆಕಿಮ್ ಸಿಂಗ್ಸಿತ್ ಅವರೊಂದಿಗೆ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದಾಗ ಶಸ್ತ್ರಸಜ್ಜಿತ ವ್ಯಕ್ತಿಗಳು ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ದಾಳಿಯಲ್ಲಿ ಹಾವೋಲಾಲ್ ಸಿಂಗ್ಸಿತ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅವರ ಪತ್ನಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಂಜೆ ಸುಮಾರು 4ರ ವೇಳೆಗೆ ಗುಂಡಿನ ಸದ್ದು ಕೇಳಿಬಂದಿದೆ ಎಂದು ಗ್ರಾಮಸ್ಥರನ್ನು ಉಲ್ಲೇಖಿಸಿ ಅಧಿಕಾರಿಗಳು ತಿಳಿಸಿದ್ದಾರೆ.
ಬಳಿಕ ಭದ್ರತಾ ಪಡೆಗಳು ಘಟನಾ ಸ್ಥಳಕ್ಕೆ ಧಾವಿಸಿ ಶವವನ್ನು ಪಡೆದುಕೊಂಡಿದ್ದಾರೆ.

