ನವದೆಹಲಿ: ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನಡೆಸುತ್ತಿರುವ ಪ್ರತಿಭಟನೆಯ ಕುರಿತು ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್) ವಿಚಾರಣೆಯನ್ನು ಶುಕ್ರವಾರ ನಡೆಸಲು ದೆಹಲಿ ಹೈಕೋರ್ಟ್ ಒಪ್ಪಿಗೆ ಸೂಚಿಸಿದೆ.
ಈ ಕುರಿತು ಮುಖ್ಯ ನ್ಯಾಯಮೂರ್ತಿ ಡಿ.ಕೆ. ಉಪಾಧ್ಯಾಯ ಹಾಗೂ ನ್ಯಾಯಮೂರ್ತಿ ತೇಜಸ್ ಕಾರಿಯಾ ಅವರಿದ್ದ ಪೀಠವು ಅರ್ಜಿಯನ್ನು ಪರಿಶೀಲಿಸಿತು.
ವಿದ್ಯಾರ್ಥಿಗಳ ಹೆಸರಿನಲ್ಲಿ ನಡೆಯುತ್ತಿರುವ ಈ ಆಂದೋಲನದಿಂದಾಗಿ ಇಡೀ ದೆಹಲಿಯನ್ನು ಒತ್ತೆಯಾಳಾಗಿ ಇರಿಸಿಕೊಳ್ಳಲಾಗಿದೆ. ರಸ್ತೆ ಬಂದ್ ಮಾಡಲಾಗಿದ್ದು, ನಾಗರಿಕರು ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ, ಎಂದು ವಕೀಲ ಬರುಣ್ ಕುಮಾರ್ ಸಿನ್ಹಾ ಉಲ್ಲೇಖಿಸಿದರು.
ಇದಕ್ಕೆ ಸ್ಪಂದಿಸಿದ ಮುಖ್ಯ ನ್ಯಾಯಮೂರ್ತಿ ಉಪಾಧ್ಯಾಯ ಅವರು, 'ಸರಿ, ನಾಳೆ ವಿಚಾರಣೆ ನಡೆಸಲಾಗುವುದು' ಎಂದು ಸೂಚಿಸಿದರು.
ಅಖಿಲ ಭಾರತ ಹಿಂದೂ ಮಹಾಸಭಾದ ಮಾಜಿ ಉಪಾಧ್ಯಕ್ಷ ಸತೀಶ್ ಕುಮಾರ್ ಅಗರವಾಲ್ ಈ ಕುರಿತು ಪಿಐಎಲ್ ಸಲ್ಲಿಸಿದ್ದರು. ಪ್ರತಿಭಟನೆಯಲ್ಲಿ ರಾಜಕೀಯ ನಾಯಕರು, ಸಕ್ರಿಯ ಕಾರ್ಯಕರ್ತರು ಮತ್ತು ವಿದೇಶಿ ಧನಸಹಾಯ ಪಡೆಯುವ ಸಂಸ್ಥೆಗಳು ಭಾಗಿಯಾಗಿರುವುದು ಆಂದೋಲನದ ನೈಜ ಉದ್ದೇಶದ ಬಗ್ಗೆ ಅನುಮಾನ ಹುಟ್ಟುಹಾಕಿದೆ ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.

