ಲಖನೌ: ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಅಧ್ಯಕ್ಷ ಮಹಂತ್ ನೃತ್ಯ ಗೋಪಾಲ್ ದಾಸ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
'ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಮಹಂತ್ ದಾಸ್ ಅವರನ್ನು ಸೋಮವಾರ(ಜೂನ್ 29) ಮಧ್ಯಾಹ್ನ 1.30ರ ಸುಮಾರಿಗೆ ಆಸ್ಪತ್ರೆಗೆ ಕರೆತರಲಾಗಿತ್ತು' ಎಂದು ವೇದಾಂತ ಆಸ್ಪತ್ರೆ ಬಿಡುಗಡೆ ಮಾಡಿದ ಬುಲೆಟಿನ್‌ನಲ್ಲಿ ತಿಳಿಸಿದೆ.
ಪ್ರಾಥಮಿಕ ತಪಾಸಣೆಯ ನಂತರ ಅವರು ಮೂತ್ರನಾಳದ ಸೋಂಕಿನಿಂದ ಬಳಲುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
'ತುರ್ತು ನಿಗಾ ಘಟಕದ ತಜ್ಞ ಡಾ. ದಿಲೀಪ್ ಮತ್ತು ಅವರ ತಂಡದ ಮೇಲ್ವಿಚಾರಣೆಯಲ್ಲಿ ದಾಸ್ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯರು ಅವರ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಅಗತ್ಯವಿರುವ ಎಲ್ಲಾ ಚಿಕಿತ್ಸೆ ನೀಡುತ್ತಿದ್ದಾರೆ' ಎಂದು ಆಸ್ಪತ್ರೆ ತಿಳಿಸಿದೆ.

