ನವದೆಹಲಿ: ಕಳೆದ ಹಲವು ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಹೋರಾಟಗಾರ ಸೊನಮ್ ವಾಂಗ್ಚೂಕ್ ಅವರನ್ನು ದೆಹಲಿಯ ಸಫ್ದರ್‌ಜಂಗ್ ಆಸ್ಪತ್ರೆಯಿಂದ ಅವರು ಇಚ್ಛಿಸಿದ ಮೆದಾಂತ ಆಸ್ಪತ್ರೆಗೆ ಸ್ಥಳಾಂತರಿಸಲು ದೆಹಲಿ ಹೈಕೋರ್ಟ್ ಮಂಗಳವಾರ ಸಮ್ಮತಿ ಸೂಚಿಸಿದೆ.
ಮುಖ್ಯ ನ್ಯಾಯಮೂರ್ತಿ ಡಿ.ಕೆ.ಉಪಾಧ್ಯಾಯ ಹಾಗೂ ನ್ಯಾಯಮೂರ್ತಿ ತೇಜಸ್ ಕಾರಿಯಾ ಅವರನ್ನೊಳಗೊಂಡ ವಿಭಾಗೀಯ ಪೀಠವು ಈ ಆದೇಶ ನೀಡಿದೆ.
ವಾಂಗ್ಚೂಕ್ ಅವರ ಪತ್ನಿ ಡಾ.ಗೀತಾಂಜಲಿ ಆಂಗ್ಮೊ ಅವರು ಸಫ್ದರ್‌ಜಂಗ್ ಆಸ್ಪತ್ರೆಯಿಂದ ತಮ್ಮ ಪತಿಯನ್ನು ಸ್ಥಳಾಂತರಿಸಲು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ್ದ ಏಕಸದಸ್ಯ ಪೀಠದ ತೀರ್ಪನ್ನು ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ್ದರು.
ವಾಂಗ್ಚೂಕ್ ಅವರ ಪರ ವಾದ ಮಂಡಿಸಿದ ಹಿರಿಯ ವಕೀಲ ಅಖಿಲ್ ಸಿಬಲ್, 'ಸಂಪೂರ್ಣ ಪ್ರಜ್ಞಾವಸ್ಥೆಯಲ್ಲಿರುವ ಹಾಗೂ ಸ್ವತಃ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯ ಹೊಂದಿರುವ ವ್ಯಕ್ತಿಯು, ತಾವು ಎಲ್ಲಿ ಚಿಕಿತ್ಸೆ ಪಡೆಯಬೇಕು ಎಂದು ನಿರ್ಧರಿಸಬಲ್ಲರು. ಆ ಹಕ್ಕನ್ನು ಕಸಿದುಕೊಳ್ಳುವುದು ಸರಿಯಲ್ಲ. ಬಂಧನದಲ್ಲಿ ಇಲ್ಲದ ವ್ಯಕ್ತಿಯ ವೈದ್ಯಕೀಯ ಸ್ವಾಯತ್ತತೆಗೆ ಬೆಲೆ ನೀಡಬೇಕು. ಚಿಕಿತ್ಸೆಯ ಪ್ರತಿಯೊಂದು ವಿವರ ಪಾರದರ್ಶಕವಾಗಿರಬೇಕು' ಎಂದು ನ್ಯಾಯಾಲಯದ ಗಮನಕ್ಕೆ ತಂದರು.
ಕೇಂದ್ರ ಸರ್ಕಾರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, 'ವ್ಯಕ್ತಿಯ ವೈಯಕ್ತಿಕ ನಿರ್ಧಾರದ ಹಕ್ಕು ಮುಖ್ಯವಾದರೂ, ಜೀವ ರಕ್ಷಣೆ ಮಾಡುವುದು ಸರ್ಕಾರದ ಕರ್ತವ್ಯ. ಆರೋಗ್ಯ ತೀವ್ರವಾಗಿ ಕ್ಷೀಣಿಸಿದರೆ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಯಾಗುವ ಸಾಧ್ಯತೆಯಿರುತ್ತದೆ' ಎಂದು ಸ್ಪಷ್ಟನೆ ನೀಡಿದರು.

