ಇಸ್ಲಾಮಾಬಾದ್: ಅಫ್ಗಾನಿಸ್ತಾನದಲ್ಲಿ ನಡೆದ ವೈಮಾನಿಕ ದಾಳಿಗಳಿಗೆ ಸಂಬಂಧಿಸಿದಂತೆ ಭಾರತದ ಹೇಳಿಕೆಯನ್ನು ತಿರಸ್ಕರಿಸಿರುವ ಪಾಕಿಸ್ತಾನ, ಕೇವಲ ಭಯೋತ್ಪಾದಕ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲಾಗಿದೆ ಎಂದು ತಿಳಿಸಿದೆ.
ಸೋಮವಾರ ಅಫ್ಗಾನಿಸ್ತಾನದ ಮೇಲೆ ಪಾಕಿಸ್ತಾನ ನಡೆಸಿದ ವೈಮಾನಿಕ ದಾಳಿಯನ್ನು ತೀವ್ರವಾಗಿ ಖಂಡಿಸಿದ್ದ ಭಾರತ, ಪ್ರಾದೇಶಿಕ ಶಾಂತಿ ಹಾಗೂ ಸ್ಥಿರತೆಗೆ ನೇರ ಬೆದರಿಕೆ ಎಂದು ಕರೆದಿತ್ತು.
ಭಾರತದ ಹೇಳಿಕೆ ಕುರಿತು ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಪಾಕಿಸ್ತಾನ ವಿದೇಶಾಂಗ ಕಚೇರಿಯ ವಕ್ತಾರ ತಾಹಿರ್ ಅಂದ್ರಾವಿ, 'ಅಫ್ಘಾನಿಸ್ತಾನದಲ್ಲಿನ ಭಯೋತ್ಪಾದಕ ಮೂಲಸೌಕರ್ಯಗಳ ವಿರುದ್ಧ ಪಾಕಿಸ್ತಾನದ ಕಾನೂನುಬದ್ಧ ಕ್ರಮಗಳ ಕುರಿತು ಭಾರತೀಯ ವಿದೇಶಾಂಗ ವ್ಯವಹಾರಗಳ ಸಚಿವಾಲಯ ನೀಡಿರುವ ಆಧಾರರಹಿತ ಹೇಳಿಕೆಯನ್ನು ಪಾಕಿಸ್ತಾನ ತಿರಸ್ಕರಿಸುತ್ತದೆ' ಎಂದು ಹೇಳಿದ್ದಾರೆ.
ಮುಂದುವರಿದು, ಅಫ್ಗಾನ್ ನೆಲದಲ್ಲಿ ಪಾಕಿಸ್ತಾನದ ವಿರುದ್ಧ ಕಾರ್ಯಾಚರಣೆ ನಡೆಸುತ್ತಿರುವ ಭಯೋತ್ಪಾದಕ ಗುಂಪುಗಳಿಗೆ ಭಾರತವು ಸಹಾಯ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ.
'ಅಂತರರಾಷ್ಟ್ರೀಯ ಕಾನೂನಿಗೆ ಅನುಗುಣವಾಗಿ ತನ್ನ ನಾಗರಿಕರ ಸುರಕ್ಷತೆ ಮತ್ತು ಭದ್ರತೆಯನ್ನು ಕಾಯ್ದುಕೊಳ್ಳಲು ಪಾಕಿಸ್ತಾನವು ಎಲ್ಲಾ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳುವುದನ್ನು ಮುಂದುವರಿಸುತ್ತದೆ' ಎಂದು ಹೇಳಿದ್ದಾರೆ.

