ಬದಿಯಡ್ಕ: ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಬದಲಿಗೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ನೂತನ ವಿಬಿಜಿ ರಾಮ್ ಜಿ (ವಿಕಸಿತ್ ಭಾರತ್ - ಗ್ಯಾರಂಟಿ ಫಾರ್ ರೋಜ್ಗಾರ್ ಆಂಡ್ ಆಜೀವಿಕಾ ಮಿಷನ್ - ಗ್ರಾಮೀಣ್) ಯೋಜನೆಯ ಆರಂಭದ ನೇರ ಪ್ರಸಾರ ವೀಕ್ಷಣೆ ಕಾರ್ಯಕ್ರಮ ಬದಿಯಡ್ಕ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಜರಗಿತು.
ದೇಶದಾದ್ಯಂತ ಜುಲೈ 1 ರಿಂದ ಅಧಿಕೃತವಾಗಿ ಅನುಷ್ಠಾನಕ್ಕೆ ಬಂದಿರುವ ಈ ಮಹತ್ವಾಕಾಂಕ್ಷಿ ಯೋಜನೆಯ ರಾಷ್ಟ್ರೀಯ ಉದ್ಘಾಟನಾ ಸಮಾರಂಭದ ನೇರ ಪ್ರಸಾರವನ್ನು ಪಂಚಾಯತಿ ಸಭಾಂಗಣದಲ್ಲಿ ವ್ಯವಸ್ಥೆ ಮಾಡಲಾಗಿತ್ತು. ಕಾರ್ಯಕ್ರಮ ವೀಕ್ಷಿಸಿದ ಬಳಿಕ ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಅಶ್ವಿನಿ ಕೆ.ಎಂ.ಮಾತನಾಡಿ, "ಹೊಸ ವಿಬಿಜಿ ರಾಮ್ ಜಿ ಯೋಜನೆಯಡಿ ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ವಾರ್ಷಿಕ ಉದ್ಯೋಗದ ಖಾತರಿಯನ್ನು 100 ದಿನಗಳಿಂದ 125 ದಿನಗಳಿಗೆ ಹೆಚ್ಚಿಸಲಾಗಿದೆ. ಇದು ಗ್ರಾಮೀಣ ಭಾಗದ ಕಾರ್ಮಿಕರ ಆರ್ಥಿಕ ಸಬಲೀಕರಣಕ್ಕೆ ದೊಡ್ಡ ಕೊಡುಗೆಯಾಗಲಿದೆ ಎಂದು ತಿಳಿಸಿದರು. ಈ ನೇರ ಪ್ರಸಾರ ವೀಕ್ಷಣೆ ಕಾರ್ಯಕ್ರಮದಲ್ಲಿ ಬದಿಯಡ್ಕ ಗ್ರಾಮಪಂಚಾಯಿತಿ ಅಭಿವೃದ್ಧಿ ಸ್ಥಾಯಿಸಮಿತಿ ಅಧ್ಯಕ್ಷ ಹಮೀದ್ ಕೆಡೆಂಜಿ, ಕ್ಷೇಮಕಾರ್ಯ ಸ್ಥಾಯಿಸಮಿತಿ ಅಧ್ಯಕ್ಷೆ ರಜನಿ ಜಿ.ಆರ್., ಆರೋಗ್ಯ ಮತ್ತು ವಿದ್ಯಾಭ್ಯಾಸ ಸ್ಥಾಯಿಸಮಿತಿ ಅಧ್ಯಕ್ಷ ಅವಿನಾಶ್ ರೈ, ಗ್ರಾಮಪಂಚಾಯಿತಿ ಸದಸ್ಯರು ಪಾಲ್ಗೊಂಡಿದ್ದರು.

.jpg)
