ನವದೆಹಲಿ: ಕೇಂದ್ರ ಶಿಕ್ಷಣ ಸಚಿವರಾಗಿ ಪ್ರಲ್ಹಾದ ಜೋಶಿ ಅವರು ಇಂದು (ಭಾನುವಾರ) ಅಧಿಕಾರ ಸ್ವೀಕರಿಸಿದ್ದಾರೆ.
ನೀಟ್ ಪ್ರಶ್ನೆ ಪತ್ರಿಕೆ ವಿವಾದ ಬೆನ್ನಲ್ಲೇ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೆಂದ್ರ ಪ್ರಧಾನ್ ಶನಿವಾರ ರಾಜೀನಾಮೆ ನೀಡಿದ್ದರು. ಇದಾದ ಬಳಿಕ ಜೋಶಿ ಅವರಿಗೆ ಹೆಚ್ಚುವರಿ ಹೊಣೆ ವಹಿಸಲಾಗಿದೆ.
ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಈ ಕುರಿತು ಪೋಸ್ಟ್ ಮಾಡಿರುವ ಪ್ರಲ್ಹಾದ ಜೋಶಿ, 'ಇಂದು ಭಾರತ ಸರ್ಕಾರದ ಕೇಂದ್ರ ಶಿಕ್ಷಣ ಸಚಿವನಾಗಿ ಅಧಿಕಾರ ವಹಿಸಿಕೊಂಡೆನು. ನನ್ನ ಮೇಲೆ ಅಪಾರ ನಂಬಿಕೆಯಿಟ್ಟು ಈ ಗುರುತರ ಜವಾಬ್ದಾರಿಯನ್ನು ಹಸ್ತಾಂತರಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿಅವರಿಗೆ ನನ್ನ ಹೃದಯಪೂರ್ವಕ ಕೃತಜ್ಞತೆಗಳು. ಅತ್ಯಂತ ವಿನಮ್ರತೆ ಹಾಗೂ ನಿಷ್ಠೆಯಿಂದ ಈ ಕರ್ತವ್ಯವನ್ನು ಸ್ವೀಕರಿಸುತ್ತಿದ್ದೇನೆ' ಎಂದು ಹೇಳಿದ್ದಾರೆ.
ಜೋಶಿ ಅವರು ಪ್ರಸ್ತುತ ನಿರ್ವಹಿಸುತ್ತಿರುವ ಗ್ರಾಹಕ ವ್ಯವಹಾರಗಳ ಸಚಿವಾಲಯದ ಹೊಣೆಗಾರಿಕೆಯ ಜೊತೆಗೆ ಹೆಚ್ಚುವರಿಯಾಗಿ ಶಿಕ್ಷಣ ಸಚಿವಾಲಯದ ಉಸ್ತುವಾರಿಯನ್ನೂ ವಹಿಸಿಕೊಂಡಿದ್ದಾರೆ.
ನೀಟ್ ಹಾಗೂ ಪರೀಕ್ಷಾ ಅಕ್ರಮಗಳ ಹೊಣೆ ಹೊತ್ತುಕೊಂಡು ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಒತ್ತಾಯಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು. ಕೊನೆಗೂ ವಿದ್ಯಾರ್ಥಿಗಳ ಒತ್ತಡಕ್ಕೆ ಮಣಿದು ರಾಜೀನಾಮೆ ಸಲ್ಲಿಸಿದ್ದರು. ಕೇಂದ್ರ ಸರ್ಕಾರದ ನೀಡಿದ ಭರವಸೆ ಹಾಗೂ ಬೇಡಿಕೆ ಈಡೇರಿದ ಹಿನ್ನೆಲೆಯಲ್ಲಿ ಪ್ರತಿಭಟನೆಯನ್ನು ಸಿಜೆಪಿ ಹಿಂಪಡೆದಿತ್ತು.

