ನವದೆಹಲಿ: ಜುಲೈ 20ರಂದು ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಆಯೋಜಿಸಿರುವ ಸಂಸತ್ ಜಾಥಾ ಅನ್ನು ಭಾರತದ 'ಎರಡನೇ ಸ್ವಾತಂತ್ರ್ಯ ಚಳವಳಿ' ಎಂದು ಸಾಮಾಜಿಕ ಹೋರಾಟಗಾರ ಸೊನಮ್ ವಾಂಗ್ಚೂಕ್ ಬಣ್ಣಿಸಿದ್ದಾರೆ.
ಸಫ್ದರ್‌ಜಂಗ್ ಆಸ್ಪತ್ರೆಯಿಂದ ತಮ್ಮ ಪತ್ನಿ ಮೂಲಕ ಹಸ್ತಾಕ್ಷರದ ಸಂದೇಶ ರವಾನಿಸಿರುವ ವಾಂಗ್ಚೂಕ್, ಈ ಜನಾಂದೋಲನವನ್ನು ದೊಡ್ಡ ಯಶಸ್ಸುಗೊಳಿಸುವಂತೆ ಬೆಂಬಲಿಗರಲ್ಲಿ ಮನವಿ ಮಾಡಿದ್ದಾರೆ.
'ಅನ್ಯಾಯದ ವಿರುದ್ಧ ನ್ಯಾಯ', 'ಭಯದಿಂದ ಮುಕ್ತಿ'ಗಾಗಿ ಕರೆ ನೀಡಿರುವ ಅವರು ಇದನ್ನು ಪರೀಕ್ಷಾ ಪ್ರಶ್ನೆ ಪತ್ರಿಕೆ ಸೋರಿಕೆಗೆ ಮತ್ತು ಅಕ್ರಮ ಬಂಧನಕ್ಕೆ ಹೋಲಿಸಿದ್ದಾರೆ.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ, ಶಿಕ್ಷಣ ವ್ಯವಸ್ಥೆಯಲ್ಲಿನ ಅಕ್ರಮ ಸಂಬಂಧ ಕೇಂದ್ರ ಶಿಕ್ಷಣ ಸಚಿವ ಧರ್ಮಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಪರ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸೊನಮ್ ವಾಂಗ್ಚೂಕ್ ಅವರನ್ನು ದೆಹಲಿ ಪೊಲೀಸರು ಶನಿವಾರ ಒತ್ತಾಯಪೂರ್ವಕವಾಗಿ ಆಸ್ಪತ್ರೆಗೆ ದಾಖಲಿಸಿದ್ದರು.
ವಾಂಗ್ಚೂಕ್ ಆರೋಗ್ಯದ ಮೇಲೆ ತೀವ್ರ ನಿಗಾ ಇರಿಸಲಾಗಿದ್ದು, ಇಲ್ಲಿನ ಆಸ್ಪತ್ರೆಯಲ್ಲಿ ಅವರಿಗೆ ಅಗತ್ಯ ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಸಫ್ದರ್‌ಜಂಗ್ ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ.
ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ನಡೆದಿರುವ ಅಕ್ರಮಗಳ ವಿರುದ್ಧ ಹೊಣೆಗಾರಿಕೆ, ಪರೀಕ್ಷಾ ವ್ಯವಸ್ಥೆಯಲ್ಲಿ ಸುಧಾರಣೆ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಜುಲೈ 20ರಂದು ಸಂಸತ್ ಜಾಥಾಗೆ ಕರೆ ನೀಡಿದೆ.

