ನವದೆಹಲಿ: ಅಯೋಧ್ಯೆ ರಾಮ ಮಂದಿರದಲ್ಲಿನ ದೇಣಿಗೆ ಕಳವು ಪ್ರಕರಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮೌನವಾಗಿದ್ದಾರೆ. ಇದು ಅವರ ಆಶ್ರಯದಲ್ಲೇ ನಡೆದ ಕೃತ್ಯವಾಗಿದ್ದು, ದೇಶದ ಜನರು ಬಿಜೆಪಿ ಮತ್ತು ಆರ್‌ಎಸ್‌ಎಸ್ ಅವರನ್ನು ಎಂದಿಗೂ ಕ್ಷಮಿಸುವುದಿಲ್ಲ ಎಂದು ಕಾಂಗ್ರೆಸ್ ಕಿಡಿಕಾರಿದೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, 'ರಾಮಮಂದಿರದಲ್ಲಿ ದೇಣಿಗೆ ಕಳವು ಮಾಡಿರುವುದು ಕೆಲವೇ ಉದ್ಯೋಗಿಗಳಾಗಿರುವುದಕ್ಕೆ ಸಾಧ್ಯವಿಲ್ಲ. ಸರ್ಕಾರವು ನಿಜವಾದ ಆರೋಪಿಗಳನ್ನು ರಕ್ಷಿಸುತ್ತಿದೆ. ಪ್ರಕರಣದ ಕುರಿತು ಸುಪ್ರೀಂ ಕೋರ್ಟ್ ಮೇಲ್ವಿಚಾರಣೆಯಲ್ಲಿ ಸ್ವತಂತ್ರ ತನಿಖೆಯಾಗಬೇಕು, ಆರೋಪಿಗಳಿಗೆ ಕಠಿಣ ಶಿಕ್ಷೆಯಾಗಬೇಕು' ಎಂದು ಆಗ್ರಹಿಸಿದ್ದಾರೆ.
'ದೇಣಿಗೆ ಕಳವು ಪ್ರಕರಣವು ನಂಬಿಕೆ ದ್ರೋಹದ ಕೆಲಸ. ಪ್ರತಿ ದಿನವೂ ದೇಣಿಗೆಯಲ್ಲಿ ಲಕ್ಷಾಂತರ ರೂಪಾಯಿ ಕಳ್ಳತನ ನಡೆದಿರುವುದು ಎಸ್‌ಐಟಿ ತನಿಖೆಯಲ್ಲೂ ಬಹಿರಂಗವಾಗಿದೆ. ಘಟನೆ ಬೆಳಕಿಗೆ ಬಂದು ಒಂದು ತಿಂಗಳು ಕಳೆದರೂ ಕೂಡ, ಇದರ ಕುರಿತು ಪ್ರಧಾನಿ ಮೋದಿ ಮೌನ ವಹಿಸಿದ್ದಾರೆ. ಇದರ ಹಿಂದಿನ ಕಾರಣವು ದೇಶದ ಜನತೆಗೆ ಗೊತ್ತಾಗಬೇಕಾಗಿದೆ 'ಎಂದು ಹೇಳಿದ್ದಾರೆ.
ರಾಮಮಂದಿರ ದೇಣಿಗೆ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶದ 26 ಕಡೆಗಳಲ್ಲಿ ಕಾಂಗ್ರೆಸ್ ನಾಯಕರು, ಪತ್ರಿಕಾಗೋಷ್ಠಿಯನ್ನು ಹಮ್ಮಿಕೊಂಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿಯು ಪ್ರಾಥಮಿಕ ವರದಿಯನ್ನು ಸಲ್ಲಿಸಿದ್ದು, 8 ಜನರನ್ನು ಬಂಧಿಸಲಾಗಿದೆ.

