ಪೂಂಛ್: ಮಣ್ಣಿನ ಮನೆಯ ಮೇಲೆ ಭೂಕುಸಿತ ಸಂಭವಿಸಿ ಒಂದೇ ಕುಟುಂಬದ ಏಳು ಮಂದಿ ಮೃತಪಟ್ಟಿರುವ ಘಟನೆ ಸೋಮವಾರ ಮಳೆಬಾಧಿತ ಪೂಂಛ್ ಜಿಲ್ಲೆಯ ಲೊರಾನ್ ಗ್ರಾಮದ ತಪ್ಪಲಿನಲ್ಲಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿವೆ.
ಘಟನೆಯಲ್ಲಿ ಮೃತಪಟ್ಟವರ ಪೈಕಿ ನಾಲ್ವರು ಮಹಿಳೆಯರು ಸೇರಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಶನಿವಾರ ಸಂಜೆಯಿಂದ ಪೂಂಛ್ ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಮಳೆಯಿಂದ ಉಂಟಾದ ಭೂಕುಸಿತ ಮತ್ತು ಇತರ ಮಳೆ ಸಂಬಂಧಿತ ಅವಘಡಗಳಲ್ಲಿ ಲೊರಾನ್ ಗ್ರಾಮದ ಈ ಏಳು ಮಂದಿ ಸೇರಿದಂತೆ ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 17 ಮಂದಿ ಮೃತಪಟ್ಟಿದ್ದು, ಆರು ಮಂದಿ ನಾಪತ್ತೆಯಾಗಿದ್ದಾರೆ. ನಾಪತ್ತೆಯಾದವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

