ನವದೆಹಲಿ: ಕೇಂದ್ರ ಸರ್ಕಾರವು ಉನ್ನತ ಶಿಕ್ಷಣ ಸಚಿವಾಲಯದ ಕಾರ್ಯದರ್ಶಿ ವಿನೀತ್ ಜೋಶಿ ಅವರನ್ನು ಪಂಚಾಯತ್ ರಾಜ್ ಸಚಿವಾಲಯಕ್ಕೆ ಗುರುವಾರ ವರ್ಗಾವಣೆ ಮಾಡಿದೆ. ಶಾಲಾ ಶಿಕ್ಷಣ ಹಾಗೂ ಉನ್ನತ ಶಿಕ್ಷಣ ಸಚಿವಾಲಯಗಳಿಗೆ ಹೊಸ ಕಾರ್ಯದರ್ಶಿಗಳನ್ನು ನೇಮಕ ಮಾಡಿದೆ.
ಜೋಶಿ ಅವರು ಯುಜಿಸಿಯ ಹಂಗಾಮಿ ಮುಖ್ಯಸ್ಥರಾಗಿಯೂ ಕಾರ್ಯನಿರ್ವಹಿಸುತ್ತಿದ್ದರು.
ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆಗಳು ತೀವ್ರಗೊಂಡ ಹಿನ್ನೆಲೆಯಲ್ಲಿ ಈ ಬೆಳವಣಿಗೆ ನಡೆದಿದೆ.
ನರೇಶ್ ಕುಮಾರ್ ಗಂಗ್ವಾರ್ ಅವರನ್ನು ಉನ್ನತ ಶಿಕ್ಷಣ ಸಚಿವಾಲಯದ ನೂತನ ಕಾರ್ಯದರ್ಶಿಯಾಗಿಯೂ, ಟಿ.ಕೆ. ಅನಿಲ್ ಕುಮಾರ್ ಅವರನ್ನು ಶಾಲಾ ಶಿಕ್ಷಣ ಸಚಿವಾಲಯದ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಗಂಗ್ವಾರ್ ಅವರು ಈ ಹಿಂದೆ ಪಶುಸಂಗೋಪನಾ ಸಚಿವಾಲಯದಲ್ಲಿ ಕಾರ್ಯದರ್ಶಿಯಾಗಿದ್ದರೆ, ಅನಿಲ್ ಕುಮಾರ್ ಅವರು ಗ್ರಾಮೀಣಾಭಿವೃದ್ಧಿ ಸಚಿವಾಲಯದಲ್ಲಿ ಹೆಚ್ಚುವರಿ ಕಾರ್ಯದರ್ಶಿಯಾಗಿದ್ದರು.

