ಶ್ರೀನಗರ: NEET ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವ ಅಗತ್ಯವಿಲ್ಲ ಎಂದು ಕೇಂದ್ರ ಸಚಿವ ರಾಮದಾಸ್ ಅಠಾವಳೆ ಹೇಳಿದ್ದಾರೆ. ಪ್ರಕರಣದಲ್ಲಿ ಭಾಗಿಯಾಗಿರುವವರ ವಿರುದ್ಧ ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಶ್ರೀನಗರದಲ್ಲಿ ನಡೆದ ಕಾರ್ಯಕ್ರಮವೊಂದರ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಾಮದಾಸ್ ಅಠಾವಳೆ, "ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವ ಅಗತ್ಯವಿಲ್ಲ. ಓಇಇಖಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ನಮಗೂ ಒಳ್ಳೆಯದಲ್ಲ. ಆದರೆ ಈ ಪ್ರಕರಣದಲ್ಲಿ ಸರಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬ ಅರ್ಥವಲ್ಲ" ಎಂದು ಹೇಳಿದರು.
ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವಾರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರಲ್ಲಿ ಗಮನಾರ್ಹ ಸಂಖ್ಯೆಯವರು ಮಹಾರಾಷ್ಟ್ರದವರಾಗಿದ್ದಾರೆ ಎಂದು ಅಠಾವಳೆ ತಿಳಿಸಿದರು.
ಈ ಸಂದರ್ಭದಲ್ಲಿ ಹವಾಮಾನ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಉಪವಾಸ ಸತ್ಯಾಗ್ರಹದ ಕುರಿತು ಪ್ರತಿಕ್ರಿಯಿಸಿದ ಅವರು, ವಾಂಗ್ಚುಕ್ ಉಪವಾಸವನ್ನು ಕೈಬಿಡಬೇಕು ಎಂದು ಮನವಿ ಮಾಡಿದರು. ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತೆ ಸಂಭವಿಸದಂತೆ ಸರಕಾರ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂಬ ಭರವಸೆಯನ್ನು ಅವರಿಗೆ ನೀಡಬೇಕು ಎಂದರು.
"ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಹೇಗೆ ತಡೆಯಬಹುದು ಎಂಬ ಕುರಿತು ಸಲಹೆಗಳನ್ನು ನೀಡುವ ಹಕ್ಕು ವಾಂಗ್ಚುಕ್ ಅವರಿಗೆ ಇದೆ. ಆದರೆ ಅದಕ್ಕಾಗಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವ ಅಗತ್ಯವಿಲ್ಲ" ಎಂದು ಹೇಳಿದರು.
ಇದಕ್ಕೂ ಮುನ್ನ, ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳ ನೈತಿಕ ಹೊಣೆ ಹೊತ್ತು ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಶಿಕ್ಷಣ ತಜ್ಞರೊಬ್ಬರು ಬಹಿರಂಗ ಪತ್ರದ ಮೂಲಕ ಆಗ್ರಹಿಸಿದ್ದರು.

