ಜಮ್ಮು: ಪಹಲ್ಗಾಮ್‌ನಲ್ಲಿ ಭಯೋತ್ಪಾದಕರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಭಯೋತ್ಪಾದಕ ಸಂಘಟನೆ ಲಷ್ಕರ್ ಎ ತಯಬಾ ಮುಖ್ಯಸ್ಥ ಹಫೀಜ್ ಸಯೀದ್‌ಗೆ ಜಮ್ಮುವಿನ ವಿಶೇಷ ಎನ್‌ಐಎ ನ್ಯಾಯಾಲಯವು ಜಾಮೀನು ರಹಿತ ಬಂಧನ ವಾರಂಟ್ ಜಾರಿ ಮಾಡಿದೆ.
ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಸಯೀದ್ ವಿರುದ್ಧ ಪೂರಕ ದೋಷಾರೋಪ ಪಟ್ಟಿ ಸಲ್ಲಿಸಿದ ಎರಡು ದಿನಗಳ ಬಳಿಕ ಜುಲೈ 8ರಂದು ವಿಶೇಷ ನ್ಯಾಯಾಲಯದ ನ್ಯಾಯಾಧೀಶರು ವಾರಂಟ್ ಜಾರಿ ಮಾಡಿದ್ದಾರೆ.
ಭಾರತ ಮತ್ತು ಅಮೆರಿಕದಿಂದ ಜಾಗತಿಕ ಭಯೋತ್ಪಾದಕ ಎಂದು ಹೆಸರಿಸಲ್ಪಟ್ಟಿರುವ ಸಯೀದ್, 2008ರ ಮುಂಬೈ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್ ಎಂದೂ ಪರಿಗಣಿಸಲ್ಪಟ್ಟಿದ್ದಾನೆ.
76 ವರ್ಷದ ಸಯೀದ್ ನಿಷೇಧಿತ ಲಷ್ಕರ್ ಎ ತಯಬಾ ಮತ್ತು ಅದರ ಬೆಂಬಲಿತ ದಿ ರೆಸಿಸ್ಟೆನ್ಸ್ ಫ್ರಂಟ್‌ನ ಮುಖ್ಯಸ್ಥನೆಂದು ಜಮ್ಮುವಿನ ವಿಶೇಷ ಎನ್‌ಐಎ ನ್ಯಾಯಾಲಯದ ಮುಂದೆ ಸಲ್ಲಿಸಲಾದ ಪೂರಕ ಆರೋಪಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ. ಭಾರತೀಯ ನ್ಯಾಯ ಸಂಹಿತೆ ಮತ್ತು ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆ 1967ರ ಹಲವು ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಸರ್ಗೋಧಾ ನಿವಾಸಿ ಸಯೀದ್, ಪಹಲ್ಗಾಮ್ ಭಯೋತ್ಪಾದಕ ದಾಳಿಯ ಆರೋಪಿಯಾಗಿದ್ದಾನೆ. ಬಂಧನದಿಂದ ಉದ್ದೇಶಪೂರ್ವಕವಾಗಿ ತಪ್ಪಿಸಿಕೊಳ್ಳುತ್ತಿದ್ದಾನೆ ಎಂದು ಎನ್‌ಐಎ ನ್ಯಾಯಾಲಯಕ್ಕೆ ತಿಳಿಸಿದೆ. ಈ ವಿಷಯದಲ್ಲಿ ಮುಂದಿನ ಕ್ರಮಗಳನ್ನು ಆರಂಭಿಸಲು ಮತ್ತು ಯಾವುದೇ ಕಾನೂನು ಕ್ರಮ ಕೈಗೊಳ್ಳಲು ಜಾಮೀನು ರಹಿತ ವಾರಂಟ್ ಹೊರಡಿಸುವಂತೆ ಸಂಸ್ಥೆ ಕೋರಿತ್ತು.
ಆರೋಪಿಯನ್ನು ನ್ಯಾಯಯುತ ಮತ್ತು ಪರಿಣಾಮಕಾರಿ ವಿಚಾರಣೆಗೆ ಒಳಪಡಿಸಲು ಬಂಧನ ಮತ್ತು ಕಸ್ಟಡಿ ತನಿಖೆ ಅಗತ್ಯವಿದೆ ಎಂದು ವಾದಿಸಲಾಗಿತ್ತು. ಈ ಸಂಬಂಧ ವಾರಂಟ್ ಅನ್ನು ಕಾರ್ಯಗತಗೊಳಿಸುವ ಹೊಣೆಯನ್ನು ಎನ್‌ಐಎ ಡಿಐಜಿಗೆ ನೀಡಲಾಗಿದೆ.
ಕಳೆದ ವರ್ಷದ ಏಪ್ರಿಲ್ 22ರಂದು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ನಾಗರಿಕರನ್ನು ಕೊಲ್ಲಲಾಗಿತ್ತು. ಇದಕ್ಕೆ ಪ್ರತಿಯಾಗಿ ಆಪರೇಷನ್ ಸಿಂಧೂರ ಕಾರ್ಯಾಚರಣೆ ನಡೆಸಿದ್ದ ಭಾರತ, ಪಾಕಿಸ್ತಾನದ ಭಯೋತ್ಪಾದಕ ನೆಲೆಗಳನ್ನು ಧ್ವಂಸಗೊಳಿಸಿತ್ತು.

