ನವದೆಹಲಿ: ತೃಣಮೂಲ ಕಾಂಗ್ರೆಸ್‌ನ (ಟಿಎಂಸಿ) 20 ಬಂಡಾಯ ಸಂಸದರಿಗೆ ಸುಪ್ರೀಂ ಕೋರ್ಟ್ ಮಂಗಳವಾರ ನೋಟಿಸ್ ಜಾರಿ ಮಾಡಿದೆ.
ಬಂಡಾಯ ಸಂಸದರ ಅನರ್ಹತೆ ಕುರಿತ ಅರ್ಜಿಗಳ ವಿಚಾರಣೆಯನ್ನು ತ್ವರಿತವಾಗಿ ಇತ್ಯರ್ಥಗೊಳಿಸಬೇಕು ಎಂದು ಪಕ್ಷದ ನಾಯಕ ಅಭಿಷೇಕ್ ಬ್ಯಾನರ್ಜಿ ಮನವಿ ಸಲ್ಲಿಸಿದ್ದರು.
ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿಗಳಾದ ಜಾಯ್ಮಲ್ಯ ಬಾಗ್ಚಿ ಮತ್ತು ವಿ. ಮೋಹನಾ ಅವರಿದ್ದ ಪೀಠ ಮಂಗಳವಾರ ಈ ನೋಟಿಸ್ ಜಾರಿ ಮಾಡಿದೆ.
ಲೋಕಸಭಾ ಸ್ಪೀಕರ್ ಕಚೇರಿ ಹಾಗೂ ಸದನದ ಪ್ರಧಾನ ಕಾರ್ಯದರ್ಶಿಗೆ ನೋಟಿಸ್ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಅವರನ್ನು ಪ್ರತಿನಿಧಿಸುವುದಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಹೇಳಿದ್ದರಿಂದ, ನೋಟಿಸ್ ನೀಡದಿರುವ ನಿರ್ಧಾರ ಮಾಡಿದೆ.
ಟಿಎಂಸಿಯಿಂದ ಲೋಕಸಭೆಗೆ ಚುನಾಯಿತರಾಗಿರುವ 20 ಸಂಸದರು, ಪಕ್ಷವನ್ನು ತ್ರಿಪುರಾದ ನ್ಯಾಷನಲಿಸ್ಟ್ ಸಿಟಿಜನ್ಸ್ ಪಾರ್ಟಿ ಆಫ್ ಇಂಡಿಯಾ (ಎನ್‌ಸಿಪಿಐ) ಜೊತೆ ವಿಲೀನಗೊಳಿಸುವುದಾಗಿ ಘೋಷಿಸಿದ್ದರು. ಸದನದಲ್ಲಿ ಪ್ರತ್ಯೇಕ ಮಾನ್ಯತೆ ನೀಡಬೇಕು ಎಂದೂ ಮನವಿ ಮಾಡಿದ್ದರು. ಹೀಗಾಗಿ, ಅವರ ಸದಸ್ಯತ್ವ ಅನರ್ಹಗೊಳಿಸಬೇಕು ಎಂದು ಸ್ಪೀಕರ್‌ಗೆ ಬ್ಯಾನರ್ಜಿ ಮನವಿ ಮಾಡಿದ್ದರು.

