ನವದೆಹಲಿ: ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹದ ಬಳಿಕ ಸುಮಾರು 320 ಭಾರತೀಯರುನಾಪತ್ತೆಯಾಗಿದ್ದಾರೆ. ಇದೇ ವೇಳೆ ಸುಮಾರು 400 ಭಾರತೀಯರು ಚೀನಾ ಭಾಗದಲ್ಲಿ ಸಿಲುಕಿಕೊಂಡಿದ್ದು, ಎಲ್ಲರೂ ಸುರಕ್ಷಿತವಾಗಿದ್ದಾರೆ ಎಂದು ಭಾರತದ ವಿದೇಶಾಂಗ ಸಚಿವಾಲಯ (ಎಂಇಎ) ತಿಳಿಸಿದೆ.
ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗೆ ಅಗತ್ಯವಿರುವ ಎಲ್ಲ ರೀತಿಯ ನೆರವು ನೀಡಲು ಭಾರತ ಸಿದ್ಧವಾಗಿದೆ ಎಂದು ಎಂಇಎ ವಕ್ತಾರ ರಣಧೀರ್ ಜೈಸ್ವಾಲ್ ಹೇಳಿದ್ದಾರೆ.
ಚೀನಾ ಭಾಗದಲ್ಲಿ ಸಿಲುಕಿದ್ದ 96 ಭಾರತೀಯ ನಾಗರಿಕರು ಭೂಮಾರ್ಗದ ಮೂಲಕ ಸುರಕ್ಷಿತವಾಗಿ ನೇಪಾಳ ತಲುಪಿದ್ದಾರೆ. ಅಲ್ಲಿಂದ ಕಠ್ಮಂಡುವಿಗೆ ಬಂದ ಮರುದಿನವೇ ತಮಿಳುನಾಡಿನ 21 ಭಾರತೀಯರು ನವದೆಹಲಿಗೆ ಆಗಮಿಸಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.
'ಸುಮಾರು 320 ಭಾರತೀಯರು ನಮ್ಮ ಸಂಪರ್ಕಕ್ಕೆ ಸಿಕ್ಕಿಲ್ಲ. ಅವರ ಬಗ್ಗೆ ಮಾಹಿತಿ ಕಲೆಹಾಕುವ ಪ್ರಯತ್ನ ನಡೆಯುತ್ತಿದೆ. ಚೀನಾ ಭಾಗದಲ್ಲಿ ಸುಮಾರು 400 ಭಾರತೀಯರು ಸಿಲುಕಿಕೊಂಡಿದ್ದಾರೆ. ಅವರೆಲ್ಲರೂ ಸುರಕ್ಷಿತವಾಗಿದ್ದು, ನಮ್ಮ ರಾಯಭಾರ ಕಚೇರಿ ಅಧಿಕಾರಿಗಳು ಅವರಲ್ಲಿ ಹಲವರೊಂದಿಗೆ ಸಂಪರ್ಕದಲ್ಲಿದ್ದಾರೆ' ಎಂದು ತಿಳಿಸಿದ್ದಾರೆ.
ನೇಪಾಳದ ಅಧಿಕಾರಿಗಳು ನೀಡಿರುವ ಇತ್ತೀಚಿನ ಮಾಹಿತಿಯ ಪ್ರಕಾರ, ಬುಧವಾರ ಸಂಭವಿಸಿದ ದಿಢೀರ್ ಪ್ರವಾಹದಲ್ಲಿ ಮೃತಪಟ್ಟವರ ಸಂಖ್ಯೆ 547ಕ್ಕೆ ಏರಿಕೆಯಾಗಿದೆ. ಪ್ರವಾಹದಿಂದ ಹಲವು ಪ್ರದೇಶಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

