ಕೊಲಂಬೊ: ಶ್ರೀಲಂಕಾದಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆ ಹಾಗೂ ಭೂಕುಸಿತ, ಪ್ರವಾಹದಿಂದಾಗಿ ಕನಿಷ್ಠ ಆರು ಮಂದಿ ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ.
ಐದು ಜಿಲ್ಲೆಗಳಲ್ಲಿ ಎಡಬಿಡದೆ ಮಳೆ ಸುರಿಯುತ್ತಿರುವ ಕಾರಣ ಭೂಕುಸಿತ, ಪ್ರವಾಹ ಉಂಟಾಗಿದೆ.
ಭಾರಿ ಮಳೆ-ಗಾಳಿಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಸುಮಾರು 1,900 ಜನರನ್ನು ಪರಿಹಾರ ಕೇಂದ್ರಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.
ಭೂಕುಸಿತ ಉಂಟಾಗಿ ಮನೆಯೊಂದು ಉರುಳಿಬಿದ್ದ ಪರಿಣಾಮ ನಾಲ್ವರು ಮಹಿಳೆಯರು ಮೃತಪಟ್ಟಿದ್ದಾರೆ. ಸೇತುವೆ ದಾಟುವ ವೇಳೆ 53 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ. ರಸ್ತೆ ಬದಿಯ ಅಂಗಡಿ ಕುಸಿದುಬಿದ್ದ ಪರಿಣಾಮ 67 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಭಾರಿ ಮಳೆ ಮತ್ತು ಗಾಳಿ ಇರುವುದರಿಂದ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ಕೇಂದ್ರ ಪಾಂತ್ಯದ ಎಲ್ಲಾ ಶಾಲೆಗಳಿಗೆ ಮಂಗಳವಾರ ರಜೆ ಘೋಷಿಸಲಾಗಿತ್ತು.

