ಜೈಪುರ: ರಾಜಸ್ಥಾನದ ಸ್ಥಳೀಯ ಸಂಸ್ಥೆಗಳು ಮತ್ತು ಪಂಚಾಯತ್ ರಾಜ್ ಚುನಾವಣೆಗಳನ್ನು ಒಟ್ಟಿಗೆ ನಡೆಸುವ ಮೂಲಕ 'ಒಂದು ರಾಜ್ಯ-ಒಂದು ಚುನಾವಣೆ' ಮಾದರಿಯನ್ನು ಜಾರಿಗೊಳಿಸಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ರಾಜ್ಯ ಚುನಾವಣಾ ಆಯುಕ್ತ ರಾಜೇಶ್ವರ್ ಸಿಂಗ್ ಮಂಗಳವಾರ(ಆ.11) ತಿಳಿಸಿದ್ದಾರೆ.
ವಿಡಿಯೊ ಕಾನ್ಪರೆನ್ಸ್ ಮೂಲಕ ಚುನಾವಣಾ ಅಧಿಕಾರಿಗಳು ಮತ್ತು ಕಾಲೇಜು ಪ್ರಾಂಶುಪಾಲರೊಂದಿಗೆ ಸಂವಹನ ನಡೆಸಿದ ರಾಜೇಶ್ವರ್ ಸಿಂಗ್, ಯುವ ಮತದಾರರನ್ನು ಚುನಾವಣಾ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳುವುದು, ಮತದಾನದ ಬಗ್ಗೆ ಜಾಗೃತಿ ಮೂಡಿಸುವುದು ಮತ್ತು ಕಾಲೇಜು ಮಟ್ಟದಲ್ಲಿ ಚುನಾವಣಾ ಸಾಕ್ಷರತಾ ಚಟುವಟಿಕೆಗಳನ್ನು ನಡೆಸುವ ಕುರಿತು ಚರ್ಚಿಸಿದ್ದಾರೆ.
ದೇಶದಲ್ಲಿ ಪಂಚಾಯತ್ ರಾಜ್ ವ್ಯವಸ್ಥೆಯು ರಾಜಸ್ಥಾನದಿಂದಲೇ ಪ್ರಾರಂಭವಾಗಿದೆ. ಇದೀಗ 'ಒಂದು ರಾಜ್ಯ-ಒಂದು ಚುನಾವಣೆ'ಗೆ ಸಿದ್ಧತೆ ಆರಂಭವಾಗಿದ್ದು, ಸ್ಥಳೀಯ ಸಂಸ್ಥೆಗಳು ಮತ್ತು ಪಂಚಾಯತ್ ರಾಜ್ ಚುನಾವಣೆಗಳು ಒಟ್ಟಿಗೆ ನಡೆಯಲಿದೆ ಎಂದು ಅವರು ಹೇಳಿದ್ದಾರೆ.
ಈ ನಿರ್ಧಾರವು ಚುನಾವಣಾ ಪ್ರಕ್ರಿಯೆಯನ್ನು ಸರಳ, ಹೆಚ್ಚು ಪರಿಣಾಮಕಾರಿ ಮತ್ತು ಪಾರದರ್ಶಕಗೊಳಿಸುವ ನಿಟ್ಟಿನಲ್ಲಿ ಪ್ರಮುಖ ಹೆಜ್ಜೆಯಾಗಿದೆ ಎಂದು ಅವರು ಹೇಳಿದ್ದಾರೆ.
ಯುವ ಮತದಾರರು ತಮ್ಮ ಹೆಸರುಗಳನ್ನು ಮತದಾರರ ಪಟ್ಟಿಯಲ್ಲಿ ಸೇರಿಸಲಾಗಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು. ವದಂತಿಗಳು, ಆಮಿಷಗಳು ಅಥವಾ ಒತ್ತಡಗಳಿಗೆ ಒಳಗಾಗದೆ ವಿವೇಚನೆಯಿಂದ ತಮ್ಮ ಮತದಾನದ ಹಕ್ಕನ್ನು ಚಲಾಯಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

