ನವದೆಹಲಿ: ಸೇನೆಗೆ ಸಂಬಂಧಿಸಿದ ಮಾಹಿತಿಯನ್ನು ಪಾಕಿಸ್ತಾನದ ಗುಪ್ತಚರ ಅಧಿಕಾರಿಯೊಂದಿಗೆ ಹಂಚಿಕೊಂಡ ಆರೋಪದಲ್ಲಿ ಭಾರತೀಯ ವಾಯುಸೇನೆಯ ಅಧಿಕಾರಿಯನ್ನು ಬಂಧಿಸಲಾಗಿದೆ ಎಂದು ಶನಿವಾರ ಪೊಲೀಸರು ತಿಳಿಸಿದ್ದಾರೆ.
ಹನಿಟ್ರ್ಯಾಪ್‌ಗೆ ಸಿಲುಕಿದ ಅಧಿಕಾರಿಯು ಸಾಮಾಜಿಕ ಮಾಧ್ಯಮದ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ.
ವಾಯುಸೇನೆಯು ನೀಡಿದ ದೂರನ್ನು ಆಧರಿಸಿ, ಆರೋಪಿ ಅಧಿಕಾರಿಯ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಮೇ 30ರಂದು ಆರೋಪಿ ಅಧಿಕಾರಿಯನ್ನು ಬಂಧಿಸಲಾಗಿತ್ತು. ಪ್ರಕರಣದ ತನಿಖೆ ಪೂರ್ಣಗೊಳಿಸಿ ಜುಲೈ 30ರಂದು ನ್ಯಾಯಾಲಯದಲ್ಲಿ ಆರೋಪಪಟ್ಟಿ ಸಲ್ಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪಾಕಿಸ್ತಾನದ ಗುಪ್ತಚರ ಸಂಸ್ಥೆಯ ಪರ ಬೇಹುಗಾರಿಕೆ ನಡೆಸುತ್ತಿದ್ದ ಮಹಿಳೆ, ಸಾಮಾಜಿಕ ಮಾಧ್ಯಮಗಳ ಮೂಲಕ ವಾಯುಸೇನೆಯ ಅಧಿಕಾರಿಯನ್ನು ಸಂಪರ್ಕಿಸಿದ್ದಳು. ಅಧಿಕಾರಿಯ ಸ್ನೇಹ ಗಳಿಸಿ, ಸಾಮಾಜಿಕ ಮಾಧ್ಯಮಗಳ ಮೂಲಕ ಸಂಪರ್ಕದಲ್ಲಿದ್ದಳು. ವಿಡಿಯೊ ಕರೆ ಸೇರಿದಂತೆ ವಿವಿಧ ರೀತಿಯಲ್ಲಿ ಡಿಜಿಟಲ್ ವೇದಿಕೆಗಳಲ್ಲಿ ಮಾತುಕತೆ ನಡೆಸಿರುವುದು ತನಿಖೆಯಿಂದ ಪತ್ತೆಯಾಗಿದೆ. ಆರೋಪಿಯು ಸೇನೆಗೆ ಸಂಬಂಧಿಸಿದ ಹಲವು ಮಾಹಿತಿಗಳನ್ನು ಮಹಿಳೆಯೊಂದಿಗೆ ಹಂಚಿಕೊಂಡಿರುವುದು ಕಂಡುಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

