ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆ ನಡೆಸುತ್ತಿದ್ದ ಫಾಸ್ಟ್ ಟ್ರ್ಯಾಕ್ ಕೋರ್ಟ್‌ನ ವಿಶೇಷ ನ್ಯಾಯಾಧೀಶೆ ಅನು ಗ್ರೋವರ್ ಬಾಲಿಗಾ ಸೇರಿದಂತೆ 137 ನ್ಯಾಯಾಧೀಶರನ್ನು ದೆಹಲಿ ಹೈಕೋರ್ಟ್ ವರ್ಗಾವಣೆ ಮಾಡಿದೆ.
ನ್ಯಾಯಾಧೀಶೆ ಬಾಲಿಗಾ ಅವರು ಜುಲೈ 25ರಂದು ಅಧಿಕಾರ ವಹಿಸಿಕೊಂಡಿದ್ದರು.
ಒಂದೇ ವಾರಕ್ಕೆ ಅವರನ್ನು ಮತ್ತೆ ವರ್ಗಾವಣೆ ಮಾಡಲಾಗಿದೆ. ಇವರ ಸ್ಥಾನಕ್ಕೆ ಅಜಯ್ ಗುಪ್ತಾ ಅವರನ್ನು ನಿಯೋಜಿಸಲಾಗಿದೆ.
ಶನಿವಾರ ಹೈಕೋರ್ಟ್ ಹೊರಡಿಸಿರುವ ಆದೇಶದ ಪ್ರಕಾರ, ನ್ಯಾಯಾಧೀಶೆ ಬಾಲಿಗಾ ಅವರನ್ನು ಭಯೋತ್ಪಾದನಾ ಪ್ರಕರಣಗಳ ವಿಚಾರಣೆ ನಡೆಸುವ ವಿಶೇಷ ಎನ್‌ಐಎ ನ್ಯಾಯಾಲಯಕ್ಕೆ ವರ್ಗಾಯಿಸಲಾಗಿದೆ.
ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಲು ಫಾಸ್ಟ್ ಟ್ರ್ಯಾಕ್ ನ್ಯಾಯಾಲಯಗಳನ್ನು ಸ್ಥಾಪಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಈ ಹಿಂದೆ ಘೋಷಿಸಿದ್ದರು.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಮೊದಲ ವಿಚಾರಣೆ ಜುಲೈ 27ರಂದು ನಡೆದಿತ್ತು. ಪ್ರತಿವಾದಿ ಪರ ವಕೀಲರ ಮನವಿ ಮೇರೆಗೆ ಕಲಾಪವನ್ನು ಮುಂದೂಡಲಾಗಿತ್ತು. ಸಿಬಿಐ ಸಲ್ಲಿಸಿರುವ ದೋಷಾರೋಪ ಪಟ್ಟಿ ಹಾಗೂ ಇಬ್ಬರು ಆರೋಪಿಗಳ ಜಾಮೀನು ಅರ್ಜಿಯ ಪರಿಶೀಲನೆಗಾಗಿ ನ್ಯಾಯಾಧೀಶರು ಪ್ರಕರಣವನ್ನು ಸೋಮವಾರಕ್ಕೆ ಮುಂದೂಡಿದ್ದಾರೆ.
ಈ ಪ್ರಕರಣದಲ್ಲಿ ಸಿಬಿಐ 13 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಿದ್ದು, ಎಲ್ಲ ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ.

