ಮುಂಬೈ: ದಕ್ಷಿಣ ಮುಂಬೈನ ನೌಕಾ ನಗರ ಪ್ರದೇಶದಲ್ಲಿರುವ ನಿವಾಸದಲ್ಲಿ ಭಾರತೀಯ ನೌಕಾಪಡೆಯ ನಾವಿಕರೊಬ್ಬರು, ಅವರ ಪತ್ನಿ ಮತ್ತು ಇಬ್ಬರು ಮಕ್ಕಳು ನಿಗೂಢವಾಗಿ ಮೃತಪಟ್ಟಿದ್ದಾರೆ.
ಶನಿವಾರ ರಾತ್ರಿ ನಾವಿಕನ ಮೃತದೇಹ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪಕ್ಕದಲ್ಲೇ ಅವರ ಪತ್ನಿ ಹಾಗೂ ಎರಡು ತಿಂಗಳ ಮಗು ಹಾಗೂ ಮೂರು ವರ್ಷದ ಮತ್ತೊಂದು ಮಗುವಿನ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಾಥಮಿಕ ತನಿಖೆಯ ಪ್ರಕಾರ, ನಾವಿಕ ಆತ್ಮಹತ್ಯೆ ಮಾಡಿಕೊಂಡಿರುವಂತೆ ತೋರುತ್ತಿದೆ. ಅದಕ್ಕೂ ಮುನ್ನವೇ, ಪತ್ನಿ ಹಾಗೂ ಮಕ್ಕಳಿಗೆ ವಿಷ ನೀಡಿರಬಹುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಪೊಲೀಸರು ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ.
ಪೊಲೀಸ್ ತನಿಖೆ ನಡೆಯುತ್ತಿದ್ದು, ಎಲ್ಲ ರೀತಿಯ ಸಹಕಾರ ನೀಡುವುದಾಗಿ ನೌಕಾಪಡೆಯು ಪ್ರಕಟಣೆಯಲ್ಲಿ ತಿಳಿಸಿದೆ.

