ನವದೆಹಲಿ (PTI): ರಾಜಕೀಯ ಪಕ್ಷಗಳು 'ಅನಾಮಧೇಯ' ಮೂಲಗಳಿಂದ ₹2,000ಕ್ಕಿಂತ ಕಡಿಮೆ ನಗದು ದೇಣಿಗೆ ಸ್ವೀಕರಿಸಲು ಅನುಮತಿಸುವ ಆದಾಯ ತೆರಿಗೆ ಕಾಯ್ದೆಯ ನಿಬಂಧನೆಯ ಸಿಂಧುತ್ವವನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ ನಡೆಸಲಿದೆ.
ನ್ಯಾಯಮೂರ್ತಿಗಳಾದ ವಿಕ್ರಮ ನಾಥ್ ಮತ್ತು ಸಂದೀಪ್ ಮೆಹ್ತಾ ಅವರ ಪೀಠವು ಈ ವಿಷಯದ ವಿಚಾರಣೆ ನಡೆಸುವ ಸಾಧ್ಯತೆಯಿದೆ.
ಈ ಅರ್ಜಿಗೆ ಸಂಬಂಧಿಸಿದಂತೆ ಸುಪ್ರಿಂ ಕೋರ್ಟ್ ಈ ಹಿಂದೆ ಕೇಂದ್ರ ಸರ್ಕಾರ, ಚುನಾವಣಾ ಆಯೋಗ ಮತ್ತು ಇತರರಿಗೆ ಪ್ರತಿಕ್ರಿಯೆ ಕೋರಿ ನೋಟಿಸ್ ಜಾರಿಗೊಳಿಸಿತ್ತು.
'ದೇಣಿಗೆಯ ಮೂಲವನ್ನು ಬಹಿರಂಗಪಡಿಸದೇ ಇರುವುದರಿಂದ ಮತದಾರರಿಗೆ ರಾಜಕೀಯ ಪಕ್ಷಗಳ ಬಳಿಯಿರುವ ನಿಧಿಯ ಮೂಲದ ಬಗ್ಗೆ ಮಾಹಿತಿ ದೊರೆಯುವುದಿಲ್ಲ. ಈ ಪಾರದರ್ಶಕತೆಯ ಕೊರತೆಯು ಚುನಾವಣಾ ಪ್ರಕ್ರಿಯೆಯ ಪರಿಶುದ್ಧತೆ ಯನ್ನು ಹಾಳು ಮಾಡುತ್ತದೆ' ಎಂದು ಅರ್ಜಿಯಲ್ಲಿ ಹೇಳಲಾಗಿದೆ.

