ಲಖನೌ: ಬಿಜೆಪಿ ಮತ್ತು ಕಾಂಗ್ರೆಸ್ ರಾಜಕೀಯ ಉದ್ದೇಶಕ್ಕಾಗಿ 'ಜೆನ್-ಝೀ' ಮತ್ತು ವಿದ್ಯಾರ್ಥಿಗಳ ಪ್ರತಿಭಟನೆಯನ್ನು ಹೈಜಾಕ್ ಮಾಡುತ್ತಿವೆ. ಯುವಜನರು ಅವರ ಪಿತೂರಿಗಳಿಂದ ದೂರವಿರಿ ಎಂದು ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಅವರು ಮನವಿ ಮಾಡಿದ್ದಾರೆ.
ದೇಶದಾದ್ಯಂತ ಯುವಜನರು ಮತ್ತು ವಿದ್ಯಾರ್ಥಿಗಳು ತಮ್ಮ ಸಮಸ್ಯೆಗಳ ಬಗ್ಗೆ ಚಿಂತಿತರಾಗಿದ್ದಾರೆ.
ಅವುಗಳನ್ನು ಬಗೆಹರಿಸುವ ವಿಷಯದಲ್ಲಿ ಬಿಎಸ್‌ಪಿಯು ಗಂಭೀರ ಮತ್ತು ಸಂವೇದನಾಶೀಲವಾಗಿ ಉಳಿದಿದೆ ಎಂದು ಹೇಳಿದ್ದಾರೆ.
ಜಂತರ್‌ಮಂತರ್‌ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ(ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯನ್ನು ಕಾಂಗ್ರೆಸ್ ಮತ್ತು ಅದರ ಮಿತ್ರ ಪಕ್ಷಗಳು ಹೈಜಾಕ್ ಮಾಡಿದ್ದವು. ಇದೀಗ ಜಾರ್ಖಂಡ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಯನ್ನು ಬಿಜೆಪಿ ಹೈಜಾಕ್ ಮಾಡಿದೆ ಎಂದು ಆರೋಪಿಸಿದ್ದಾರೆ.
ಸರ್ಕಾರಗಳ ವೈಫಲ್ಯಗಳಿಂದ ಸಾರ್ವಜನಿಕರ ಗಮನವನ್ನು ಬೇರೆಡೆಗೆ ಸೆಳೆಯುವ ಉದ್ದೇಶದಿಂದ ಸಂಸತ್ತಿನ ಕಲಾಪಗಳಲ್ಲಿ ಬೇರೆ ವಿಷಯಗಳನ್ನು ಪ್ರಸ್ತಾಪಿಸಲಾಗುತ್ತಿದೆ. ಯುವಜನರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಬಿಜೆಪಿ, ಕಾಂಗ್ರೆಸ್ ಪಕ್ಷಗಳು ಪ್ರಯತ್ನಿಸುತ್ತಿಲ್ಲ ಎಂದು ಕಿಡಿಕಾರಿದ್ದಾರೆ.
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಯುವಜನರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸುತ್ತಿಲ್ಲ. ಈ ಕುರಿತು ಸರ್ಕಾರಗಳು ತುರ್ತು ಗಮನಹರಿಸಬೇಕು ಎಂದು ಹೇಳಿದ್ದಾರೆ.

