ನವದೆಹಲಿ: ಸಂವಿಧಾನದ 370ನೇ ವಿಧಿಯಡಿ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದುಪಡಿಸಿದ ನಂತರ ಜಮ್ಮು-ಕಾಶ್ಮೀರ ಮತ್ತು ಲಡಾಖ್ ಚಿತ್ರಣವೇ ಬದಲಾಗಿದೆ. ಅಲ್ಲಿನ ಜನರಿಗೆ ಶಿಕ್ಷಣ, ಆರೋಗ್ಯ, ಉದ್ಯೋಗ ಮತ್ತು ಕ್ರೀಡಾ ಕ್ಷೇತ್ರದಲ್ಲಿ ಸಾಲು ಸಾಲು ಹೊಸ ಅವಕಾಶಗಳು ಸಿಗುತ್ತಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಹೇಳಿದ್ದಾರೆ.
370ನೇ ವಿಧಿಯಡಿ ನೀಡಲಾಗಿದ್ದ ವಿಶೇಷ ಸ್ಥಾನಮಾನ ರದ್ದಾಗಿ ಇಂದಿಗೆ 7 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ, 'ಏಳು ವರ್ಷಗಳ ಹಿಂದೆ ಇದೇ ದಿನ ಸಂವಿಧಾನದ ವಿಧಿ 370 ಮತ್ತು 35(ಎ) ಇತಿಹಾಸದ ಪುಟ ಸೇರಿದವು. ಇದು ಜಮ್ಮು-ಕಾಶ್ಮೀರ ಮತ್ತು ಲಡಾಖ್‌ನ ಪಯಣದಲ್ಲಿ ಹೊಸ ಅಧ್ಯಾಯಕ್ಕೆ ನಾಂದಿ ಹಾಡಿತು ಎಂದು ಬರೆದುಕೊಂಡಿದ್ದಾರೆ.
ದಶಕಗಳಿಂದ ಹಕ್ಕುಗಳನ್ನು ಕಳೆದುಕೊಂಡಿದ್ದ ಮಹಿಳೆಯರಿಗೆ ಮತ್ತು ಹಿಂದುಳಿದ ವರ್ಗದ ಜನರಿಗೆ ಈಗ ಸಂಪೂರ್ಣ ನ್ಯಾಯ ಸಿಕ್ಕಿದೆ. ಜಮ್ಮು-ಕಾಶ್ಮೀರ ಹಾಗೂ ಲಡಾಖ್‌ನ ಅಭಿವೃದ್ಧಿಗೆ ಮತ್ತು ಪ್ರತಿಯೊಬ್ಬ ಪ್ರಜೆಯೂ 'ವಿಕಸಿತ ಭಾರತ' ನಿರ್ಮಾಣಕ್ಕೆ ಕೊಡುಗೆ ನೀಡುವ ವಾತಾವರಣ ನಿರ್ಮಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದೂ ಪ್ರಧಾನಿ ಪುನರುಚ್ಚರಿಸಿದ್ದಾರೆ.
2019ರ ಆಗಸ್ಟ್ 5 ರಂದು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ, 370ನೇ ವಿಧಿಯಡಿ ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಲಾದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿತು. ಅಲ್ಲದೇ ಆ ರಾಜ್ಯವನ್ನು ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್ ಎಂಬ ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಲಾಯಿತು.

