ಲಖನೌ: ಕೆಂಪುಕೋಟೆ ದೇಶವನ್ನುದ್ದೇಶಿಸಿ ಮಾತನಾಡುವ ಸ್ಥಳವೇ ಹೊರತು ಸುಳ್ಳು ಹೇಳುವ ಸ್ಥಳವಲ್ಲ ಎಂದು ಸಮಾಜವಾದಿ ಪಕ್ಷದ (ಎಸ್‌ಪಿ) ಅಧ್ಯಕ್ಷ ಅಖಿಲೇಶ್ ಯಾದವ್ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಮಹಿಳಾ ಮೀಸಲಾತಿ ಮಸೂದೆ ಜಾರಿಗೆ ರಾಜಕೀಯ ಪಕ್ಷಗಳು ಒಗ್ಗೂಡಬೇಕು ಎಂದು ಪ್ರಧಾನಿ ಮೋದಿ ಕರೆ ನೀಡಿದ್ದಕ್ಕೆ ಪ್ರತಿಕ್ರಿಯಿಸಿದ ಅಖಿಲೇಶ್, ಮಹಿಳಾ ಮೀಸಲಾತಿ ಮಸೂದೆ 2023ರಲ್ಲೇ ಸಂಸತ್ತಿನಲ್ಲಿ ಅಂಗೀಕಾರಗೊಂಡಿದೆ.
ಅದನ್ನು 2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಜಾರಿಗೆ ತರಬೇಕು ಎಂದು ಆಗ್ರಹಿಸಿದರು.
ಲಖನೌನ ಎಸ್‌ಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಕೆಂಪುಕೋಟೆಯಿಂದ ಸುಳ್ಳು ಹೇಳಬಾರದು. ಅದು ಸುಳ್ಳು ಹೇಳುವ ಸ್ಥಳವಲ್ಲ' ಎಂದಿದ್ದಾರೆ.
2023ರ ಸೆಪ್ಟೆಂಬರ್‌ನಲ್ಲಿ ಸಂಸತ್ತು 'ನಾರಿ ಶಕ್ತಿ ವಂದನ್ ಅಧಿನಿಯಮ'ವನ್ನು ಅಂಗೀಕರಿಸಿತ್ತು. ಆದರೆ 2024ರ ಲೋಕಸಭಾ ಚುನಾವಣೆಯಲ್ಲಿ ಅದು ಜಾರಿಗೆ ಬಂದಿರಲಿಲ್ಲ ಎಂದು ಅವರು ಪ್ರಸ್ತಾಪಿಸಿದರು.
ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆ ಕುರಿತು ಪ್ರಸ್ತಾಪಿಸಿದ ಅಖಿಲೇಶ್, ದೇಶದ ಗಡಿಗಳ ಭದ್ರತೆ ಬಗ್ಗೆ ಹೆಚ್ಚು ಗಮನಹರಿಸಬೇಕೇ ಹೊರತು ಕ್ಷೇತ್ರಗಳ ಗಡಿ ಬದಲಾವಣೆ ಬಗ್ಗೆ ಅಲ್ಲ ಎಂದು ಹೇಳಿದರು.
ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಮತ್ತು ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ನೀಡಲಾಗುತ್ತಿರುವ ತೊಂದರೆ ಪ್ರಜಾಪ್ರಭುತ್ವದಲ್ಲಿ ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದರು.

