ಇಂದೋರ್ (PTI): ಇಲ್ಲಿನ ಜವಾಹರಲಾಲ್ ನೆಹರೂ ಕ್ರೀಡಾಂಗಣದಲ್ಲಿ 'ಛಾತ್ರೋಂ ಕಿ ಗೂಂಜ್' (ವಿದ್ಯಾರ್ಥಿಗಳ ಧ್ವನಿ) ಕಾರ್ಯಕ್ರಮವನ್ನು ಆಯೋಜಿಸಲು ರಾಜ್ಯ ಸರ್ಕಾರ ಅನುಮತಿ ನಿರಾಕರಿಸಿದೆ. ಹೀಗಾಗಿ, ಕಾರ್ಯಕ್ರಮವನ್ನು ಇದೇ 12ರ ಬದಲಿಗೆ 19ರಂದು ನಡೆಸಲಾಗುವುದು ಎಂದು ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಜಿತು ಪಟ್ವಾರಿ ತಿಳಿಸಿದ್ದಾರೆ.
ಕಾರ್ಯಕ್ರಮದ ಸಿದ್ಧತೆ ಕುರಿತು ಬುಧವಾರ ನಡೆದ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, 'ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆದರೆ, ಅನುಮತಿ ಸಿಗದ ಕಾರಣ, ಹೊಸ ಸ್ಥಳವನ್ನು ನಿಗದಿಪಡಿಸಿ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುವುದು' ಎಂದು ಹೇಳಿದ್ದಾರೆ.
ಇದಕ್ಕೂ ಮೊದಲು, ಕ್ರೀಡಾಂಗಣದಲ್ಲಿ ಕಾರ್ಯಕ್ರಮಕ್ಕೆ ಅನುಮತಿ ನೀಡುವಂತೆ ಕೋರಿ ಪಟ್ವಾರಿ ಅವರು ಮುಖ್ಯಮಂತ್ರಿ ಮೋಹನ್ ಯಾದವ್ ಅವರಿಗೆ ಪತ್ರ ಬರೆದಿದ್ದರು.
'ರಾಹುಲ್ ಗಾಂಧಿ ಅವರ ಕಾರ್ಯಕ್ರಮವು ರಾಜಕೀಯ ಸಮಾರಂಭವಲ್ಲ. ದೇಶದ ಭವಿಷ್ಯ, ಯುವಕರ ಕನಸುಗಳು, ಶಿಕ್ಷಣದ ಹಕ್ಕು ಮತ್ತು ಶಿಕ್ಷಣ ವ್ಯವಸ್ಥೆಯ ಸುರಕ್ಷತೆ ಯಂತಹ ಪ್ರಮುಖ ವಿಷಯಗಳ ಮೇಲೆ ಕೇಂದ್ರೀಕರಿಸಿದ ಸಾರ್ವಜನಿಕ ಸಂವಾದವಾಗಿದೆ' ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.
ನೆಹರೂ ಕ್ರೀಡಾಂಗಣವು ಇಂದೋರ್ ಮಹಾನಗರ ಪಾಲಿಕೆ ವ್ಯಾಪ್ತಿಗೆ ಬರುತ್ತದೆ.
'ಕ್ರೀಡಾಂಗಣದಲ್ಲಿ ಕ್ರೀಡಾ ಚಟುವಟಿಕೆ, ರಾಜ್ಯಮಟ್ಟದ ಸರ್ಕಾರಿ ಕಾರ್ಯಕ್ರಮ ಗಳಿಗೆ ಮಾತ್ರ ಅನುಮತಿ ನೀಡಬಹುದು ಎಂದು ಮಧ್ಯಪ್ರದೇಶ ಹೈಕೋರ್ಟ್ ಸ್ಪಷ್ಟವಾಗಿ ಹೇಳಿದೆ' ಎಂದು ಮೇಯರ್ ಪುಷ್ಯಮಿತ್ರ ಭಾರ್ಗವ ತಿಳಿಸಿದ್ದಾರೆ.

