ನವದೆಹಲಿ: ಇಂದು (ಸೆಪ್ಟೆಂಬರ್19) ನಡೆಯಲಿರುವ 20ನೇ ರೋಜ್‌ಗಾರ್ ಮೇಳ'ದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ₹51 ಸಾವಿರಕ್ಕೂ ಹೆಚ್ಚು ಯುವಕರಿಗೆ ನೇಮಕ ಪತ್ರಗಳನ್ನು ವಿತರಿಸಲಿದ್ದಾರೆ ಎಂದು ಪ್ರಧಾನಮಂತ್ರಿ ಕಾರ್ಯಾಲಯ (ಪಿಎಂಒ) ತಿಳಿಸಿದೆ.
ಮಧ್ಯಾಹ್ನ ವಿಡಿಯೊ ಕಾನ್ಫರೆನ್ಸ್ ಮೂಲಕ ಪ್ರಧಾನಿಯವರು ಆಯ್ಕೆಯಾದ ಅಭ್ಯರ್ಥಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಈ ಉದ್ಯೋಗ ಮೇಳವು ದೇಶದ 45 ವಿವಿಧ ಕೇಂದ್ರಗಳಲ್ಲಿ ಏಕಕಾಲದಲ್ಲಿ ಆಯೋಜನೆಗೊಳ್ಳಲಿದೆ. ಆಯ್ಕೆಯಾದ ಅಭ್ಯರ್ಥಿಗಳು ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳು ಮತ್ತು ಇಲಾಖೆಗಳಿಗೆ ಸೇರ್ಪಡೆಗೊಳ್ಳಲಿದ್ದಾರೆ.
ಕಂದಾಯ ಇಲಾಖೆ, ರೈಲ್ವೆ ಸಚಿವಾಲಯ, ಗೃಹ ಸಚಿವಾಲಯ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ, ಹಣಕಾಸು ಸೇವೆಗಳ ಇಲಾಖೆ ಹಾಗೂ ರಕ್ಷಣಾ ಸಚಿವಾಲಯ ಸೇರಿದಂತೆ ಹಲವು ಪ್ರಮುಖ ಇಲಾಖೆಗಳಲ್ಲಿ ನೇಮಕ ಮಾಡಿಕೊಳ್ಳಲಾಗುತ್ತಿದೆ.
ಈ 20ನೇ ಆವೃತ್ತಿಯೊಂದಿಗೆ, ರೋಜ್‌ಗಾರ್ ಮೇಳದ ಮೂಲಕ ನೇಮಕ ಪತ್ರ ಪಡೆದ ಒಟ್ಟು ಯುವಕರ ಸಂಖ್ಯೆ ಸುಮಾರು 12.75 ಲಕ್ಷಕ್ಕೆ ತಲುಪಲಿದೆ.
ಕೇಂದ್ರ ಸರ್ಕಾರದ ವಿವಿಧ ಸಂಸ್ಥೆಗಳು ಮತ್ತು ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಯನ್ನು ವೇಗಗೊಳಿಸಲು ಹಾಗೂ ದೇಶದ ಅಭಿವೃದ್ಧಿಯಲ್ಲಿ ಯುವಜನರ ಭಾಗವಹಿಸುವಿಕೆಯನ್ನು ಹೆಚ್ಚಿಸಲು ಸರ್ಕಾರ ಈ ಅಭಿಯಾನವನ್ನು ಹಮ್ಮಿಕೊಂಡಿದೆ.

