ಗ್ರೇಟರ್ ನೋಯ್ಡಾ: ಇಲ್ಲಿನ ಯಮುನಾ ಎಕ್ಸ್‌ಪ್ರೆಸ್‌ವೇಯಲ್ಲಿ ಗುರುವಾರ ಮುಂಜಾನೆ ಸ್ಲೀಪರ್ ಪ್ರವಾಸಿ ಬಸ್‌ಗೆ ಬೆಂಕಿ ಹೊತ್ತಿಕೊಂಡ ಪರಿಣಾಮ 9 ಜನರು ಮೃತಪಟ್ಟು ಹಲವರು ತೀವ್ರವಾಗಿ ಗಾಯಗೊಂಡಿದ್ದಾರೆ.
ಬೆಂಕಿ ಅವಘಡಕ್ಕೆ ನಿಖರವಾದ ಕಾರಣ ಇನ್ನು ತಿಳಿದುಬಂದಿಲ್ಲ. ದೆಹಲಿಯಿಂದ ಉತ್ತರ ಪ್ರದೇಶದ ಮಹೋಬಾಗೆ ಪ್ರಯಾಣಿಸುತ್ತಿದ್ದ ವೇಳೆ ಈ ದುರಂತ ಸಂಭವಿಸಿದೆ.
ಅಪಘಾತದ ಸಮಯದಲ್ಲಿ ಬಹುತೇಕ ಪ್ರಯಾಣಿಕರು ಗಾಢ ನಿದ್ರೆಯಲ್ಲಿದ್ದರು ಎಂದು ವರದಿಯಾಗಿದೆ.
ಬಸ್‌ಗೆ ಧಿಡೀರ್ ಬೆಂಕಿ ಹೊತ್ತಿಕೊಂಡಿದ್ದರಿಂದ ಜೀವ ಉಳಿಸಿಕೊಳ್ಳಲು ಹಲವು ಪ್ರಯಾಣಿಕರು ಕಿಟಕಿಗಳಿಂದ ಹೊರಗೆ ಜಿಗಿದಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಸ್ಥಳೀಯರು, ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಿ ಮೃತದೇಹಗಳನ್ನು ಹೊರತೆಗೆದಿದ್ದಾರೆ.
ಸಿಎಂ ಯೋಗಿ ಕಂಬನಿ: ಘಟನೆ ಕುರಿತು ಮಾಹಿತಿ ಪಡೆದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಮೃತರ ಕುಟುಂಬಸ್ಥರಿಗೆ ಸಂತಾಪ ಸೂಚಿಸಿದ್ದಾರೆ. ಅಲ್ಲದೆ, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ಮತ್ತು ಸಂತ್ರಸ್ತ ಕುಟುಂಬಗಳಿಗೆ ಅಗತ್ಯವಿರುವ ಎಲ್ಲಾ ನೆರವು ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

