ಮುಂಬೈ: ಚುನಾವಣಾ ಆಯೋಗದ ಆಯುಕ್ತರ ನಡುವೆ ಭಿನ್ನಾಭಿಪ್ರಾಯಗಳು ವರದಿಯಾದ ಬೆನ್ನಲ್ಲೇ, ಈ ಕುರಿತು ಮಾತನಾಡಿರುವ ಶಿವಸೇನಾ(ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ, 'ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಹುದ್ದೆಯಿಂದ ಕೆಳಗಿಳಿಸಿ, ಜೈಲಿಗೆ ಕಳಿಸಬೇಕು' ಎಂದು ಹೇಳಿದ್ದಾರೆ.
ಈ ಕುರಿತು ಸುದ್ಧಿಗೋಷ್ಠಿಯಲ್ಲಿ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, 'ಎಸ್‌ಐಆರ್ ಆರಂಭವಾದ ನಂತರ ಮಹಾರಾಷ್ಟ್ರ, ಪಶ್ಚಿಮ ಬಂಗಾಳ ಮತ್ತು ತಮಿಳುನಾಡಿನಲ್ಲಿ ನಡೆದಿರುವ ಚುನಾವಣೆಗಳನ್ನು ರದ್ದುಗೊಳಿಸಬೇಕು. ಮತಪತ್ರಗಳನ್ನು ಬಳಸಿಕೊಂಡು ಮರುಚುನಾವಣೆ ಮಾಡಬೇಕು' ಎಂದು ಆಗ್ರಹಿಸಿದ್ದಾರೆ.
ಚುನಾವಣಾ ಆಯುಕ್ತರಾದ ಸುಖಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ಅವರು ಜ್ಞಾನೇಶ್ ಕುಮಾರ್ ಅವರ ಅಪರಾಧವನ್ನು ಬಯಲುಗೊಳಿಸಿದ್ದಕ್ಕೆ ಧನ್ಯವಾದಗಳನ್ನು ತಿಳಿಸುತ್ತೇನೆ. ಇದುವರೆಗೆ ಚುನಾವಣಾ ಆಯೋಗವು ತೆಗೆದುಕೊಂಡಿರುವ ತಪ್ಪು ನಿರ್ಧಾರಗಳನ್ನು ಇಬ್ಬರು ಚುನಾವಣಾ ಆಯುಕ್ತರು ರದ್ದುಗೊಳಿಸಬೇಕು ಎಂದು ಹೇಳಿದ್ದಾರೆ.
ಈ ವಿಷಯದ ಕುರಿತು ಎಲ್ಲ ವಿರೋಧ ಪಕ್ಷಗಳು ಒಟ್ಟಾಗಿ ದೇಶದ ಸಂವಿಧಾನವನ್ನು ಉಳಿಸಬೇಕು. ಇದನ್ನು ನ್ಯಾಯಾಲಯವು ಕೂಡ ಗಂಭೀರವಾಗಿ ಪರಿಗಣಿಸಬೇಕು ಎಂದು ಹೇಳಿದ್ದಾರೆ.
ಸಂಧು ಮತ್ತು ಜೋಶಿ ಅವರು ಎಸ್‌ಐಆರ್ ಕುರಿತು ಚುನಾವಣಾ ಆಯೋಗದ ನಿರ್ಧಾರಗಳಿಗೆ ಕಳೆದ 10 ತಿಂಗಳಲ್ಲಿ 14 ಬಾರಿ ಆಕ್ಷೇಪ ವ್ಯಕ್ತಪಡಿಸಿದ್ದರು ಎಂದು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ವರದಿ ಮಾಡಿದೆ. ಇದರ ಬೆನ್ನಲ್ಲೇ ವಿರೋಧ ಪಕ್ಷಗಳ ನಾಯಕರು ಜ್ಞಾನೇಶ್ ಕುಮಾರ್ ಅವರ ವಿರುದ್ಧ ಕಿಡಿಕಾರುತ್ತಿದ್ದಾರೆ.

