ಕೋಲ್ಕತ್ತ: ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಸೋದರ ಸಂಬಂಧಿ ನಿಹಾರ್ ಮುಖರ್ಜಿ ಎಂಬುವವರ ಪುತ್ರಿ ಬೃಷ್ಟಿ ಮುಖರ್ಜಿ(28) ಆತ್ಮಹತ್ಯೆಗೆ ಶರಣಾಗಿದ್ದಾರೆ.
ಇಲ್ಲಿನ ಬೀರ್ಭೂಮ್ ಜಿಲ್ಲೆಯ ಕುಸುಂಬಾ ಗ್ರಾಮದಲ್ಲಿರುವ ಅವರ ಮನೆಯ ಮೊದಲ ಮಹಡಿಯಲ್ಲಿ ಮಂಗಳವಾರ ಬೆಳಿಗ್ಗೆ 9ರ ಸುಮಾರಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಶವ ಪತ್ತೆಯಾಗಿದೆ.
ಬೃಷ್ಟಿ ಅವರು ಕಳೆದ ಕೆಲವು ವರ್ಷಗಳಿಂದ ತೀವ್ರ ಖಿನ್ನತೆಯಿಂದ ಬಳಲುತ್ತಿದ್ದು, ಅದಕ್ಕಾಗಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಪಶ್ಚಿಮ ಬಂಗಾಳದ ಪ್ರಾಥಮಿಕ ಶಿಕ್ಷಕರ ನೇಮಕ ಪ್ರಕ್ರಿಯೆ ವೇಳೆ ಬೃಷ್ಟಿ ಅಕ್ರಮವಾಗಿ ಕೆಲಸ ಗಿಟ್ಟಿಸಿಕೊಂಡಿದ್ದರು ಎಂಬ ಆರೋಪವಿತ್ತು. ಜೊತೆಗೆ, ಅವರು ತಮ್ಮ ಪತಿಯಿಂದ ವಿಚ್ಛೇದನ ಕೋರಿ ನ್ಯಾಯಾಲಯದ ಮೊರೆ ಹೋಗಿದ್ದರು.
ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ರಾಂಪುರ್ಹತ್ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ರವಾನಿಸಲಾಗಿದೆ.
ಮರಣೋತ್ತರ ಪರೀಕ್ಷೆಯ ವರದಿ ಬಂದ ನಂತರವೇ ಘಟನೆಗೆ ನಿಖರ ಕಾರಣ ತಿಳಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

