ನವದೆಹಲಿ: ಪ್ರತಿಯೊಬ್ಬ ವಿದ್ಯಾರ್ಥಿಗೂ ಸಮಾನ ಅವಕಾಶ ಮತ್ತು ಗುಣಮಟ್ಟದ ಶಿಕ್ಷಣ ನೀಡುವ ವ್ಯವಸ್ಥೆಯನ್ನು ರೂಪಿಸುವಂತೆ ಶಿಕ್ಷಕರಿಗೆ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಕರೆ ನೀಡಿದ್ದಾರೆ.
ದೇಶದ ಮಾಜಿ ರಾಷ್ಟ್ರಪತಿ ಡಾ. ಸರ್ವೇಪಲ್ಲಿ ರಾಧಾಕೃಷ್ಣನ್ ಜೀ ಅವರ ಜಯಂತಿಯಂದು ಅವರಿಗೆ ನಮನಗಳನ್ನು ಸಲ್ಲಿಸುತ್ತೇನೆ ಎಂದು 'ಎಕ್ಸ್'ನಲ್ಲಿ ಪೋಸ್ಟ್ ಮಾಡಿದ್ದಾರೆ.
'ರಾಷ್ಟ್ರೀಯ ಶಿಕ್ಷಕರ ದಿನಾಚರಣೆಯ ಸಂದರ್ಭದಲ್ಲಿ ಗೌರವಾನ್ವಿತ ಶಿಕ್ಷಕರೆಲ್ಲರಿಗೂ ಶುಭಾಶಯಗಳು. ಜ್ಞಾನ, ಸೇವೆ ಮತ್ತು ಸಮರ್ಪಣಾ ಮನೋಭಾವದಿಂದ ನೀವು ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುತ್ತೀರಿ ಹಾಗೂ ದೇಶದ ಮುಂದಿನ ಪೀಳಿಗೆಗೆ ಮಾರ್ಗದರ್ಶನ ನೀಡುತ್ತೀರಿ. ನಿಮ್ಮ ಕೊಡುಗೆ ಅತ್ಯಮೂಲ್ಯವಾದದ್ದು' ಎಂದಿದ್ದಾರೆ.
'ಇಂದು, ದೇಶದ ಶಿಕ್ಷಣ ವ್ಯವಸ್ಥೆಯು ನಮ್ಮ ಮುಂದೆ ಹಲವಾರು ಗಂಭೀರ ಪ್ರಶ್ನೆಗಳನ್ನು ತಂದೊಡ್ಡಿದೆ. ಪ್ರತಿಯೊಬ್ಬ ವಿದ್ಯಾರ್ಥಿಗೂ ಸಮಾನ ಅವಕಾಶಗಳು, ಗುಣಮಟ್ಟದ ಶಿಕ್ಷಣ ಮತ್ತು ಉಜ್ವಲ ಭವಿಷ್ಯ ಸಿಗುವಂತಹ ವ್ಯವಸ್ಥೆಯನ್ನು ನಾವೆಲ್ಲರೂ ಒಟ್ಟಾಗಿ ನಿರ್ಮಿಸಬೇಕಿದೆ' ಎಂದು ತಿಳಿಸಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೂ ಶಿಕ್ಷಕರಿಗೆ ಮತ್ತು ಸರ್ವೇಪಲ್ಲಿ ರಾಧಾಕೃಷ್ಣನ್ ಅವರಿಗೆ ಗೌರವ ಸಲ್ಲಿಸಿದ್ದಾರೆ.
ಶಿಕ್ಷಕರು ಮಕ್ಕಳಲ್ಲಿ ಮೌಲ್ಯಗಳನ್ನು ಬೆಳೆಸುವ ಮೂಲಕ ದೇಶದ ಭವಿಷ್ಯಕ್ಕೆ ಭದ್ರ ಅಡಿಪಾಯ ಹಾಕುತ್ತಿದ್ದಾರೆ ಎಂದು ಮಲ್ಲಿಕಾರ್ಜುನ ಖರ್ಗೆ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿದ್ದಾರೆ.
ಖ್ಯಾತ ತತ್ತ್ವಜ್ಞಾನಿ, ಶಿಕ್ಷಕ ಮತ್ತು ರಾಜತಾಂತ್ರಿಕರಾಗಿದ್ದ ಡಾ. ರಾಧಾಕೃಷ್ಣನ್ ಅವರ ವಿಚಾರಧಾರೆ ಸದಾ ಕಾಲಕ್ಕೂ ಪ್ರೇರಣೆಯಾಗುತ್ತದೆ ಎಂದು ಅವರು ಶ್ಲಾಘಿಸಿದ್ದಾರೆ.
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಸಾಮಾಜಿಕ ಮಾಧ್ಯಮದಲ್ಲಿ ಸರ್ವೇಪಲ್ಲಿ ರಾಧಾಕೃಷ್ಣನ್ ಅವರ ಸಾಧನೆಯನ್ನು ಸ್ಮರಣಿಸಿದ್ದಾರೆ.

