ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ದೆಹಲಿ, ಉತ್ತರ ಪ್ರದೇಶ, ಹಿಮಾಚಲ ಪ್ರದೇಶ, ಹರಿಯಾಣ ಮತ್ತು ಭುವನೇಶ್ವರ ಸೇರಿದಂತೆ ದೇಶದ ಹಲವೆಡೆ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು.
ಕಾಂಗ್ರೆಸ್ ದೆಹಲಿ ಘಟಕವು ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಶೀಲನೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಸ್ವತಂತ್ರ ಪರಿಶೀಲನೆಗೆ ಆಗ್ರಹಿಸಿತು.
ಪಕ್ಷದ ಕಚೇರಿ ಬಳಿ ಸೇರಿದ ಹಲವು ಕಾರ್ಯಕರ್ತರು, ದೀನ ದಯಾಳ್ ಉಪಾಧ್ಯಾಯ ಮಾರ್ಗದಲ್ಲಿರುವ ಬಿಜೆಪಿ ಕಚೇರಿವರೆಗೆ ಪ್ರತಿಭಟನಾ ರ‍್ಯಾಲಿ ನಡೆಸಿದರು. ಬಳಿಕ, ಚುನಾವಣಾ ಆಯೋಗದವರೆಗೂ ಮೆರವಣಿಗೆ ಮುಂದುವರಿಸಿದರು. ದೀನ ದಯಾಳ್ ಉಪಾಧ್ಯಾಯ ಮಾರ್ಗ ಮತ್ತು ಚುನಾವಣಾ ಆಯೋಗದ ಕಚೇರಿಯ ಹೊರಗೆ ಪೊಲೀಸ್ ಮತ್ತು ಅರೆಸೇನಾಪಡೆಯ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಹಲವು ಕಡೆಗಳಲ್ಲಿ ಬ್ಯಾರಿಕೇಡ್‌ಗಳನ್ನೂ ಹಾಕಲಾಗಿತ್ತು.
ದೆಹಲಿ ಕಾಂಗ್ರೆಸ್ ಅಧ್ಯಕ್ಷ ದೇವೇಂದ್ರ ಯಾದವ್ ಅವರು, 'ಬಿಜೆಪಿ ಪ್ರತಿ ಚುನಾವಣೆಯಲ್ಲಿ ಮತಕಳವು ಮಾಡುತ್ತಿದೆ. ಜ್ಞಾನೇಶ್ ಅವರು ಕೂಡಲೇ ರಾಜೀನಾಮೆ ನೀಡಬೇಕು' ಎಂದು ಒತ್ತಾಯಿಸಿದರು.
ಲಖನೌನಲ್ಲಿ ಕಾರ್ಯಕರ್ತರು ಬ್ಯಾರಿಕೇಡ್‌ಗಳನ್ನು ದಾಟಿ, ಘೋಷಣೆಗಳನ್ನು ಕೂಗಿದರು. ಈ ವೇಳೆ ಪೊಲೀಸರು ಮತ್ತು ಪ್ರತಿಭಟನಕಾರರ ಮಧ್ಯೆ ಕೆಲಹೊತ್ತು ಸಂಘರ್ಷ ನಡೆಯಿತು. ಈ ಬೆನ್ನಲ್ಲೇ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಅಜಯ್ ರಾಯ್ ಮತ್ತಿತರರನ್ನು ಪೊಲೀಸರು ವಶಕ್ಕೆ ಪಡೆದರು.
ಹಿಮಾಚಲ ಪ್ರದೇಶದಲ್ಲಿ ಕಾರ್ಯರ್ತರು, ಜ್ಞಾನೇಶ್ ಕುಮಾರ್ ಅವರ ಪ್ರತಿಕೃತಿಯನ್ನು ದಹಿಸಿದರು. ಆಯೋಗದ ಫಲಕಕ್ಕೆ ಮಸಿ ಬಳಿದು, 'ಚೋರ್ ಆಯೋಗ' ಎಂದು ಬರೆದು ಆಕ್ರೋಶ ವ್ಯಕ್ತಪಡಿಸಿದರು.
ಎಲ್ಲೆಲ್ಲಿ ಏನೇನಾಯ್ತು?
ಪಟ್ನಾ, ಹರಿಯಾಣದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಪೊಲೀಸರು ಜಲಫಿರಂಗಿ ಪ್ರಯೋಗಿಸಿದರು
ದೆಹಲಿಯಲ್ಲಿ ಯುವ ಕಾಂಗ್ರೆಸ್ ಘಟಕದ ಕಾರ್ಯಕರ್ತರು, ಜ್ಞಾನೇಶ್ ಅವರ ಚಿತ್ರವಿರುವ ಮಾಸ್ಕ್ ಅನ್ನು ಮುಖಕ್ಕೆ ಹಾಕಿಕೊಂಡು, ಕೈಗಳನ್ನು ಸರಪಳಿಗಳಿಂದ ಸುತ್ತಿಕೊಂಡು ಪ್ರತಿಭಟಿಸಿದರು
ಮಧ್ಯಪ್ರದೇಶದಲ್ಲಿ ಎಡಪಕ್ಷಗಳು ಇದೇ 26ರಿಂದ ಅಕ್ಟೋಬರ್ 2ರವರೆಗೆ ಪ್ರತಿಭಟನೆ, ಸಾರ್ವಜನಿಕ ಸಭೆ ಮತ್ತು ಪ್ರತಿಕೃತಿ ದಹನ ನಡೆಸುವ ಅಭಿಯಾನಕ್ಕೆ ಕರೆ ನೀಡಿವೆ.
ಪ್ರತಿಭಟನಕಾರರನ್ನು ವಶಕ್ಕೆ ಪಡೆದ ಪೊಲೀಸರು
ನವದೆಹಲಿ: ಜ್ಞಾನೇಶ್ ಕುಮಾರ್ ಅವರ ರಾಜೀನಾಮೆ ಮತ್ತು ಬಂಧನಕ್ಕೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಶುಕ್ರವಾರ ಪ್ರತಿಭಟಿಸುತ್ತಿದ್ದ ಹಲವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದರು. ಪ್ರತಿಭಟನಕಾರರು ಅನುಮತಿ ಪಡೆದಿರಲಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದರು. ಸಿಪಿಐ (ಎಂಎಲ್) ಪ್ರಧಾನ ಕಾರ್ಯದರ್ಶಿ ದೀಪಂಕರ್ ಭಟ್ಟಾಚಾರ್ಯ ಸಾಮಾಜಿಕ ಹೋರಾಟಗಾರ ಯೋಗೇಂದ್ರ ಯಾದವ್ ಮತ್ತು ಇತರ ಪ್ರತಿಭಟನಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಆಯೋಜಕರು ತಿಳಿಸಿದ್ದಾರೆ. ಅಖಿಲ ಭಾರತ ವಿದ್ಯಾರ್ಥಿ ಸಂಘದ (ಎಐಎಸ್‌ಎ) ದೆಹಲಿ ಘಟಕದ ಸದಸ್ಯರು ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

