ತಿರುವನಂತಪುರ: ತ್ರಿಶೂರ್ ಜಿಲ್ಲೆಯಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಎಂಟು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾತ್ರಿ ಸುಮಾರು 11.40ರ ಸುಮಾರಿಗೆ ಕೈಪಮಂಗಲಂ ಸಮೀಪದ ಪನಂಬಿಕ್ಕುನ್ನು ಪ್ರದೇಶದಲ್ಲಿ ಅಪಘಾತ ನಡೆದಿದೆ.
ಹೆದ್ದಾರಿ ಬದಿಯಲ್ಲಿ ನಿಲ್ಲಿಸಿದ್ದ ಲಾರಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಎಂಟೂ ಮಂದಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಸ್ಥಳೀಯರ ಸಹಾಯದೊಂದಿಗೆ ಅಗ್ನಿಶಾಮಕ ಹಾಗೂ ರಕ್ಷಣಾ ಸಿಬ್ಬಂದಿ ಮೃತದೇಹಗಳನ್ನು ವಾಹನದಿಂದ ಹೊರತೆಗೆದಿದ್ದಾರೆ. ಬಳಿಕ ಮೃತದೇಹಗಳನ್ನು ತ್ರಿಶೂರ್ ವೈದ್ಯಕೀಯ ಕಾಲೇಜು ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.
ಅಪಘಾತಕ್ಕೊಳಗಾದ ಕಾರು ತಮಿಳುನಾಡಿನ ನೋಂದಣಿ ಸಂಖ್ಯೆ ಹೊಂದಿದ್ದು, ಮೃತರು ತಮಿಳುನಾಡಿನ ವಿದ್ಯಾರ್ಥಿಗಳಾಗಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕಿಸಿದ್ದಾರೆ. ಮೃತರ ಗುರುತು ಪತ್ತೆಹಚ್ಚುವ ಕಾರ್ಯ ನಡೆಯುತ್ತಿದೆ.
ಕಾರು ಗುರುವಾಯೂರು ಕಡೆಯಿಂದ ಕೊಡುಂಗಲ್ಲೂರಿನತ್ತ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

