ವಾಷಿಂಗ್ಟನ್: ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷ ಸೇರಿದಂತೆ ಜಾಗತಿಕ ಸವಾಲುಗಳನ್ನು ಎದುರಿಸುವಲ್ಲಿ ಇಂದಿನ ಅಂತರರಾಷ್ಟ್ರೀಯ ವ್ಯವಸ್ಥೆಯು ( ಸಂಬಂಧಗಳು) ವಿಫಲವಾಗಿದೆ ಎಂದು ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಕಳವಳ ವ್ಯಕ್ತಪಡಿಸಿದ್ದಾರೆ.
ವಿಶ್ವಸಂಸ್ಥೆಗೆ ಅಪಾರ ಸಾಮರ್ಥ್ಯವಿದೆ ಎಂದು ಈ ಹಿಂದೆಯೇ ಅಧ್ಯಕ್ಷ ಟ್ರಂಪ್ ಹೇಳಿದ್ದಾರೆ, ಆದರೆ ಅದು ತನ್ನ ನಿರೀಕ್ಷೆಗೆ ತಕ್ಕಂತೆ ಕಾರ್ಯನಿರ್ವಹಿಸುತ್ತಿಲ್ಲ. ಅಂತರರಾಷ್ಟ್ರೀಯ ವ್ಯವಸ್ಥೆಯು ತನ್ನ ಮೂಲ ಉದ್ದೇಶ ಮತ್ತು ವ್ಯಾಪ್ತಿಯನ್ನು ಮೀರಿ ಬೆಳೆದಿದ್ದು ಜಗತ್ತಿನ ಯಾವುದೇ ಪ್ರಮುಖ ಸಂಘರ್ಷಗಳನ್ನು ಬಗೆಹರಿಸಲು ಅದಕ್ಕೆ ಸಾಧ್ಯವಾಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
'ಸದ್ಯ ಇರುವ ಅಂತರರಾಷ್ಟ್ರೀಯ ವ್ಯವಸ್ಥೆಯು ಕುಸಿದುಬಿದ್ದಿದೆ ಎಂಬುದಕ್ಕೆ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಸರ್ವಸಮ್ಮತ ಅಭಿಪ್ರಾಯ ವ್ಯಕ್ತವಾಗಿದೆ. ಥೈಲ್ಯಾಂಡ್ ಮತ್ತು ಕಾಂಬೋಡಿಯಾ ನಡುವೆ ನಡೆದ ಯುದ್ಧವಾಗಲಿ ಅಥವಾ ಭಾರತ-ಪಾಕಿಸ್ತಾನ ನಡುವಿನ ಸಂಭಾವ್ಯ ಸಂಘರ್ಷಗಳನ್ನು ನಿರ್ವಹಿಸುವ ಸಾಮರ್ಥ್ಯ ಪ್ರಸ್ತುತ ವ್ಯವಸ್ಥೆಗಿಲ್ಲ. ಇಂತಹ ಪರಿಸ್ಥಿತಿಯಲ್ಲಿ ತಮ್ಮ ಸ್ವಂತ ಹಿತಾಸಕ್ತಿಗೆ ಅನುಗುಣವಾಗಿ ಆ ದೇಶಗಳು ನಿರ್ಧಾರ ಕೈಗೊಳ್ಳುತ್ತವೆ' ಎಂದು ಮಾರ್ಕೊ ರೂಬಿಯೊ ಹೇಳಿದರು.
ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತದಲ್ಲಿ ಅಮೆರಿಕವು ಅಂತರರಾಷ್ಟ್ರೀಯ ವ್ಯವಸ್ಥೆಗಿಂತ ದೇಶದ ರಾಷ್ಟ್ರೀಯ ಹಿತಾಸಕ್ತಿಗೆ ಮೊದಲ ಆದ್ಯತೆ ನೀಡಲಿದೆ ಎಂದು ರೂಬಿಯೊ ಸ್ಪಷ್ಟಪಡಿಸಿದರು.
ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷವನ್ನು ತಡದೆ ಎಂದು ಡೊನಾಲ್ಡ್ ಟ್ರಂಪ್ ಪ್ರತಿಪಾದಿಸಿದ್ದರು. ಆದರೆ, ಭಾರತವು ಈ ಪ್ರತಿಪಾದನೆಯನ್ನು ನಿರಾಕರಿಸುತ್ತಾ ಬಂದಿದೆ. ಉಭಯ ದೇಶಗಳ ಸೇನಾ ಕಾರ್ಯಾಚರಣೆಯ ಮಹಾನಿರ್ದೇಶಕರ ನೇರ ಮಾತುಕತೆ ಫಲವಾಗಿ ಯುದ್ಧ ವಿರಾಮ ಏರ್ಪಟ್ಟಿದೆಯೇ ಹೊರತು, ಯಾವುದೇ ಮೂರನೇ ವ್ಯಕ್ತಿ ಅಥವಾ ದೇಶದ ಮಧ್ಯಸ್ಥಿಕೆ ಇರಲಿಲ್ಲ ಎಂದು ಭಾರತ ಸ್ಪಷ್ಟಪಡಿಸಿದೆ.

